ಬೆಂಗಳೂರು,ಮೇ.8- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಹಾಸನದ ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಹಾಸನದ ಪೆನ್‌ಡ್ರೈವ್ ಹಂಚಿಕೆ ಸಂಚಿನ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಕೂಡಲೇ ಸಿಡಿದೆದ್ದಿರುವ ಜೆಡಿಎಸ್ ನಿನ್ನೆಯಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಮೈಸೂರು, ರಾಮನಗರ, ನಾಗಮಂಗಲ, ದೇವನಹಳ್ಳಿ, ಚಿತ್ರದುರ್ಗ ಮತ್ತಿತರೆಡೆ ಪ್ರತಿಭಟನೆ ನಡೆಸಲಾಗಿದೆ. ನಿನ್ನೆ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಶಿವಕುಮಾರ್ ವಿರುದ್ದದ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನಾ ನಿರತರು ಆಕ್ರೋಶ ಹೊರಹಾಕಿದರು. ಅಶ್ಲೀಲ ವಿಡಿಯೋವಿದ್ದ ಪೆನ್‌ಡ್ರೈವ್ ಹಂಚಿಕೆ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿರುವುದರಿಂದ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಪೆನ್‌ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಸಚಿವ ಸಾ.ರಾ.ಮಹೇಶ್, ಕಾಂಗ್ರೆಸ್ ಸಂಚಿನಿಂದ ಪೆನ್‌ಡ್ರೈವ್ ಹಂಚಿಕೆಯಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡರು ಹೇಳಿದಂತೆ ಎಸ್‌ಐಟಿ ಅಧಿ ಕಾರಿಗಳು ವರ್ತಿಸುತ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಯಾಗುತ್ತಿಲ್ಲ. ಪೆನ್‌ಡ್ರೈವ್ ಹಂಚಿದವರನ್ನು ಇನ್ನು ಏಕೆ ಬಂಧಿಸಿಲ್ಲ? ಕಿಡ್ನಾಪ್ ಆರೋಪದ ದೂರಿನ ಸಂಬಂಧ ಪತ್ತೆಯಾಗಿರುವ ಮಹಿಳೆಯನ್ನು ಇನ್ನು ಏಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ ಎಂದು ಪ್ರಶ್ನೆಗಳ ಸುರಿಮಳೆಗೈದರು.
ರಾಮನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಐಜೂರು ವೃತ್ತದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು. ನಾಗಮಂಗಲದಲ್ಲಿ ಸುರೇಶ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಮಾಜಿ ಸಚಿವ ಎಚ್ ಡಿ ರೇವಣ್ಣ ಬಂಧನ ಖಂಡಿಸಿ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅಧಿ ಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ನಿನ್ನೆ ಹಾಸನದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತ್ತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಹೊರಟ ಪ್ರತಿಭಟನೆಕಾರರು ಎನ್‌ಆರ್‌ವೃತ್ತದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕೃತಿಗೆ ದಹಿಸಿ, ಮಾಜಿ ಸಂಸದ ಎಲ್ .ಆರ್ ಶಿವರಾಮೇಗೌಡ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಎ.ಮಂಜು, ಶಾಸಕ ಸಿ.ಎನ್ ಬಾಲಕೃಷ್ಣ ,ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್ ಲಿಂಗೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿಯನ್ನು ದಹಿಸಲಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು. ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.