ಬೆಂಗಳೂರು, ಜೂ.27– ರಾಜ್ಯ ಸರ್ಕಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಸಿದ ನಾಡಪ್ರಭು ಕೆಂಪೇಗೌಡರ ಜಯಂತಿ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಿಲ್ಲ ಎಂದು ಆರೋಪಿಸಿ ಜೆಡಿಎಸ್ ಇಂದು ಪ್ರತಿಭಟನೆ ನಡೆಸಿತು.
ಜೆಡಿಎಸ್ ಕೇಂದ್ರ ಕಚೇರಿ ಜೆಪಿಭವನದ ಬಳಿ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್‌ಗೌಡ, ಮಾಜಿ ಅಧ್ಯಕ್ಷ ಆರ್.ರಮೇಶ್‌ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕೆಲ ಕಾಲ ಪ್ರತಿಭಟನೆ ನಡೆಸಿದ ಕೆಲವು ಜೆಡಿಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಆಹ್ವಾನಿಸದಿರುವುದಕ್ಕೆ ವಿರೋಧ ವ್ಯಕ್ತ ಪಡಿಸಲಾಗಿತ್ತು. ಅಲ್ಲದೆ, ಕುಮಾರಸ್ವಾಮಿ ಅವರು ಹೇಳಿಕೆ ನೀಡಿ, ದೆಹಲಿಯಲ್ಲೇ ಕೆಂಪೇಗೌಡರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಕೆಂಪೇಗೌಡರು ನಿರ್ಮಿಸಿದ ಕೆರೆಗಳನ್ನು ಸಂರಕ್ಷಣೆ ಮಾಡಲಿ ಎಂದಿದ್ದರು.