ಬೆಂಗಳೂರು,ಫೆ.14- ಅಧಿವೇಶನದಲ್ಲಿ ಪ್ರತಿಪಕ್ಷಗಳ ಅಸ್ತ್ರಕ್ಕೆ ಪ್ರತ್ಯಸ್ತ್ರ ರೂಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಶಾಸಕಾಂಗ ಸಭೆ ಕರೆದಿದ್ದಾರೆ. ಖಾಸಗಿ ಹೋಟೆಲ್‍ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಜಂಟಿ ಅಧಿವೇಶನದಲ್ಲಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತಾರೂಢ ಸರ್ಕಾರದ ವಿರುದ್ಧ ಕೆಲವು ಪ್ರಚಲಿತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಮುಗಿಬೀಳಲು ರಣತಂತ್ರ ರೂಪಿಸಿದೆ.
ವಿಶೇಷವಾಗಿ ಪ್ರಸ್ತುತ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಹಿಜಾಬ್, ಕೇಸರಿ ವಿವಾದ, ನೀರಾವರಿ ಯೋಜನೆಗಳು, ಕೇಂದ್ರದಿಂದ ಅನುದಾನ ಬಿಡುಗಡೆ ತಾರತಮ್ಯ, ಶಾಸಕರ ಕ್ಷೇತ್ರಗಳಿಗೆ ಅನುದಾನದ ಕೊರತೆ, ಸಚಿವರು ಮತ್ತು ಸರ್ಕಾರದ ನಡುವೆ ಹೊಂದಾಣಿಕೆ ಇಲ್ಲದಿರುವುದು, ಜಿಪಂ, ತಾಪಂ ಹಾಗೂ ಬಿಬಿಎಂಪಿ ಚುನಾವಣೆ ವಿಳಂಬ ಸೇರಿದಂತೆ ಕೆಲವು ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿದೆ.
ಇದಕ್ಕೆ ಪ್ರತಿಯಾಗಿ ಸರ್ಕಾರ ಕೂಡ ಪ್ರತಿಪಕ್ಷಗಳ ಅಸ್ತ್ರಕ್ಕೆ ಪ್ರತಿ ತಂತ್ರ ರೂಪಿಸಲು ಶಾಸಕಾಂಗ ಸಭೆ ಕರೆದಿದ್ದು, ಸದನದಲ್ಲಿ ಶಾಸಕರು ಒಗ್ಗಟ್ಟು ಪ್ರದರ್ಶಿಸಬೇಕೆಂದು ಸಿಎಂ ಸೇರಿದಂತೆ ಪಕ್ಷದ ಪ್ರಮುಖರು ಸೂಚನೆ ನೀಡಲಿದ್ದಾರೆ. ಪ್ರತಿದಿನ ಕಡ್ಡಾಯವಾಗಿ ನಿಗದಿತ ಸಮಯಕ್ಕೆ ಸರಿಯಾಗಿ ಸದನಕ್ಕೆ ಆಗಮಿಸುವುದು, ಶಾಸಕರು ಕೇಳುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವುದು ಹಾಗೂ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದಾಗ ಯಾವ ಯಾವ ಸಚಿವರು ಮಾತನಾಡಬೇಕೆಂಬ ಸಲಹೆಯನ್ನು ನೀಡಲಿದ್ದಾರೆ.
ವಿರೋಧ ಪಕ್ಷಗಳು ಪ್ರಮುಖವಾಗಿ ಹಿಜಾಬ್ ಮತ್ತು ಕೇಸರಿ ಶಾಲು ವಿಷಯವನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ. ನಾಳೆ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭವಾಗಲಿದೆ. ಪ್ರಶ್ನೋತ್ತರ ಕಲಾಪ ಆರಂಭವಾಗುವ ಮೊದಲೇ ಪ್ರತಿಪಕ್ಷಗಳು ಇದನ್ನು ಪ್ರಶ್ನಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ರಣತಂತ್ರ ರೂಪಿಸಲು ಸಜ್ಜಾಗಿದೆ.
ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಈ ವಿಷಯವನ್ನು ಪ್ರಸ್ತಾಪಿಸಿದರೆ ಸಮರ್ಪಕ ಉತ್ತರ ನೀಡಲು ಕೆಲವು ಹಿರಿಯ ಸಚಿವರನ್ನು ಮುಂದೆ ಬಿಡುವ ಸಾಧ್ಯತೆ ಇದೆ. ಈ ಹಿಂದೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ವೇಳೆ ಯಾವ ರೀತಿ ಪ್ರತಿಪಕ್ಷಗಳನ್ನು ಕಟ್ಟಿ ಹಾಕಲಾಗಿತ್ತೋ ಅದೇ ರೀತಿ ಈ ಅಧಿವೇಶನದಲ್ಲೂ ಒಗ್ಗಟ್ಟು ಪ್ರದರ್ಶಿಸಲು ಎಲ್ಲ ಶಾಸಕರಿಗೆ ಪಕ್ಷ ಸೂಚನೆ ನೀಡಲಿದೆ.
ಶಾಸಕಾಂಗ ಸಭೆಯಲ್ಲಿ ಪ್ರಮುಖವಾಗಿ ಕೆಲವು ಶಾಸಕರು ಸಚಿವರ ವರ್ತನೆಗಳ ಬಗ್ಗೆ ಕಿಡಿಕಾರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ.ರೇಣುಕಾಚಾರ್ಯ, ತಿಪ್ಪಾರೆಡ್ಡಿ, ಸೋಮಶೇಖರ ರೆಡ್ಡಿ, ರಾಜುಗೌಡ ನಾಯಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಸಂಪುಟ ವಿಸ್ತರಣೆ ಬಗ್ಗೆಯೂ ಪ್ರಸ್ತಾಪಿಸಿದ್ದರು.
ಅದರಲ್ಲೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಕೆಲವು ಸಚಿವರು ನಮ್ಮಿಂದಲೇ ಸರ್ಕಾರ ಬಂದಂತೆ ವರ್ತಿಸುತ್ತಿದ್ದಾರೆ. ಶಾಸಕರ ದೂರವಾಣಿ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ಕ್ಷೇತ್ರದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ ಎಂದು ಬಹಿರಂಗವಾಗಿಯೇ ಮಾಧ್ಯಮಗಳ ಮುಂದೆ ಅಸಮಾಧಾನ ಹೊರಹಾಕಿದ್ದರು.
ಅಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರಿಗೆ ಮೌಖಿಕವಾಗಿ ದೂರನ್ನು ಸಹ ಕೊಟ್ಟಿದ್ದರು. ಚುನಾವಣೆ ಬರುತ್ತಿರುವ ಸಂದರ್ಭ ದಲ್ಲಿ ನಮ್ಮ ಕ್ಷೇತ್ರಗಳ ಕೆಲಸ ಕಾರ್ಯ ಗಳನ್ನು ಮಾಡಿಕೊಡದಿದ್ದರೆ ಹೇಗೆ? ನಾವು ಕ್ಷೇತ್ರದಲ್ಲಿ ಮುಖ ತೋರಿಸುವುದು ಹೇಗೆ ಎಂದು ಪ್ರಶ್ನಿಸಿದ್ದರು.
ಈ ಎಲ್ಲ ವಿಷಯಗಳು ಶಾಸಕಾಂಗ ಸಭೆಯಲ್ಲಿ ಪ್ರಸ್ತಾಪವಾಗಲಿದ್ದು, ಕೆಲವು ಸಚಿವರ ವಿರುದ್ಧ ಶಾಸಕರು ತಿರುಗಿ ಬೀಳುವ ಸಂಭವವೂ ಇದೆ. ಆದರೆ ಜಂಟಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಯಾವುದೇ ಶಾಸಕರು ಸರ್ಕಾರದ ವಿರುದ್ಧ ಮಾತನಾಡದಂತೆ ಕಟ್ಟಪ್ಪಣೆ ವಿಧಿಸಿದ್ದಾರೆ.
ಸದನದಲ್ಲಿ ಎಲ್ಲ ಶಾಸಕರು ಒಗ್ಗಟ್ಟು ಪ್ರದರ್ಶಿಸಬೇಕು. ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆಗಳನ್ನು ಕೊಡುವುದು ಇಲ್ಲವೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕದಂತೆ ಸೂಚನೆ ಕೊಟ್ಟಿದ್ದಾರೆ.
