ಬೆಂಗಳೂರು,ಫೆ.16- ಮೂಲಭೂತ ಸೌಕರ್ಯಗಳಿಲ್ಲದೆ ನಿರ್ಲಕ್ಷ್ಯಕ್ಕೆ ಒಳಗಾಗಿ ರುವ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿರುವ ಇಎಸ್‍ಐ ಆಸ್ಪತ್ರೆಯನ್ನು ಪುನಃಶ್ಚೇತನಗೊಳಿಸಲು ತಕ್ಷಣವೇ ಕ್ರಿಯಾಯೋಜನೆ ರೂಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂಬಂಧ ಬೆಂಗಳೂರಿನ ವಿಧಾನ ಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷ ಸೇರಿದಂತೆ ಮತ್ತಿತರ ಅಕಾರಿಗಳಜೊತೆ ಸಭೆ ನಡೆಸಿ, ಶಹಬಾದ್‍ನ ಇಎಸ್‍ಐ ಆಸ್ಪತ್ರೆಯನ್ನು ಪುನಃಶ್ಚೇತನಗೊಳಿಸಲು ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ನಿರ್ದೇಶನ ನೀಡಿದರು.
ಶಹಬಾದ್ ಪಟ್ಟಣದ ವಾಡಿ ರಸ್ತೆಯಲ್ಲಿರುವ ಇಎಸ್‍ಐ ಆಸ್ಪತೆ ಶಿಥಿಲಾವಸ್ಥೆಯಲಿದ್ದು, ಇದಕ್ಕೆ ಆಧುನಿಕ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯೋನ್ಮುಖರಾಗಬೇಕೆಂದು ಹೇಳಿದರು.
ಆಸ್ಪತ್ರೆ ಆವರಣದಲ್ಲಿ ಬೆಳೆದು ನಿಂತಿರುವ ಗಿಡ-ಗಂಟೆಗಳು, ಬಿರುಕು ಬಿಟ್ಟಿರುವ ಗೋಡೆಗಳು, ಕೈಕೊಟ್ಟಿರುವ ವಿದ್ಯುತ್ ಸಂಪರ್ಕ, ಹಾಳಾಗಿರುವ ಬೆಡ್‍ಗಳು, ಚಿಕಿತ್ಸಾ ಕೊಠಡಿ, ರೋಗಿಗಳು ತಂಗುವ ಕೊಠಡಿಗಳು, ಶೌಚಾಲಯ, ಅಡುಗೆ ಮನೆ, ಸ್ನಾನದ ಕೋಣೆ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಬೇಕೆಂದು ಜಿಲ್ಲಾಡಳಿತಕ್ಕೆ ಸಚಿವರು ನಿರ್ದೇಶನ ನೀಡಿದರು.
ಈ ಅಸ್ಪತ್ರೆಯನ್ನು ಆತ್ಯಾಧುನಿಕ ಸೌಲಭ್ಯ ಕಲ್ಪಿಸಿ ಕೋವಿಡ್ ಕೇರ್ ಸೆಂಟರ್ ಅನ್ನಾಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ. ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು. ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಪೂರೈಕೆ, ಕುಡಿಯುವ ನೀರು, ಅಡುಗೆ ಮನೆ, ಶೌಚಾಲಯ ಸೇರಿದಂತೆ ಆಧುನಿಕ ಆಸ್ಪತ್ರೆಗೆ ಇರಬೇಕಾದ ಎಲ್ಲ ಮೂಲ ಸೌಕರ್ಯಗಳನ್ನೂ ಕಲ್ಪಿಸಬೇಕು. ಇದು ಸಮರೋಪಾದಿಯಲ್ಲಿ ನಡೆಯಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಈ ಆಸ್ಪತ್ರೆಯು ಪುನಶ್ಚೇತನಗೊಂಡರೆ ಸಾವಿರಾರು ಜನರಿಗೆ ಆರೋಗ್ಯ ಸೌಲಭ್ಯ ಸಿಗಲಿದೆ. ಒಂದು ವೇಳೆ ಯಾರಾದರೂ ಅಸಡ್ಡೆ ತೋರಿದರೆ ಅಂಥವರ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿಯೂ ಎಚ್ಚರಿಸಿದರು. ಪಾಳು ಬಿದ್ದಿರುವ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಬೇಕು. ಸರ್ಕಾರದ ವತಿಯಿಂದ ಎಲ್ಲ ರೀತಿಯ ಆರ್ಥಿಕ ನೆರವು ನೀಡಲಾಗು ವುದು. ಇದು ಜಿಲ್ಲೆಯ ಜನತೆಯ ಬಹು ದಿನಗಳ ಬೇಡಿಕೆಯಾಗಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಬೇಗ ಕೆಲಸ ಆರಂಭ ವಾಗಲಿ ಎಂದು ಸೂಚಿಸಿದರು.
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, ನಮ್ಮ ಇಲಾಖೆಯಿಂದ ಎಲ್ಲ ರೀತಿಯ ಸಹಕಾರ ನೀಡಲಿದ್ದೇವೆ. ಆರ್ಥಿಕ ನೆರವು ಸೇರಿದಂತೆ ಏನೆಲ್ಲ ಅಗತ್ಯ ಸಹಕಾರಬೇಕೋ ಎಲ್ಲ ನೆರವು ಕೊಡಲು ಸಿದ್ದರಿದ್ದೇವೆ. ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡಬೇಕೆಂದು ಹೇಳಿದರು.
