ಕಲಬುರಗಿ,ಏ.5- ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಮಿನಿಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಇಂದು ನಸುಕಿನ ಜಾವ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ಬಾಗಲಕೋಟೆ ಜಿಲ್ಲೆಯ ನವನಗರದ ನಿವಾಸಿಗಳಾದ ಮಾಲನ್ (52), ವಾಜೀದ್(2), ಮೆಹಬೂಬ್ (29),ಪ್ರಿಯಾಂಕಾ (13) ಮತ್ತು ಮೆಹಬೂಬಿ (53) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ 11 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮಿನಿಬಸ್‌ನಲ್ಲಿ ಒಟ್ಟು 31 ಮಂದಿ ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಹೋಗುತ್ತಿದ್ದರು. ಈ ಬಸ್ ಇಂದು ನಸುಕಿನ ಜಾವ ಜೀವರ್ಗಿ ತಾಲೂಕಿನ ಸೊನ್ನೆಕ್ರಾಸ್ ಬಳಿ ಹೋಗುತ್ತಿದ್ದಾಗ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ನೆಲೋಗಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಆಂಬುಲೆನ್ಸ್ ಗಳನ್ನು ಕರೆಸಿಕೊಂಡು ಗಾಯಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಐದು ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲೋಗಿ ಠಾಣೆ ಪೊಲೀಸರು ಪ್ರಕರಣ ಚಾಲಕನ ಆಸತೆಗೆ ರವಾನಿಸಿದ್ದಾರೆ. ಈ ಬಗ್ಗೆ ಜಾವ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ನಿದ್ರೆ ಮಂಪರಿನಿಂದಾಗಿ ಈ ಅವಘಡ ಸಂಭವಿಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಈ ಭೀಕರ ಅಪಘಾತದಿಂದಾಗಿ ಬೆಳಗ್ಗೆ ಈ ಮಾರ್ಗದಲ್ಲಿ ಕೆಲಕಾಲ ವಾಹನಗಳ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿದ್ದು, ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.