ತಿಮ್ಮಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದ ವೇಳೆ ಅಪಘಾತ, ಐವರು ಸಾವು, ಮೂವರು ಗಂಭೀರ

ಕಲಬುರಗಿ,ಆ.27- ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಸ್ಕಾರ್ಪಿಯೋ ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಸಂಜೀವ್‍ಕುಮಾರ್ ಚಡಚಣ (29), ರಾಣಿ ಚಡಚಣ (26), ಭಾಗ್ಯಶ್ರೀ ಅಳ್ಳಗಿ (22), ಶ್ರೇಯಸ್ ಚಡಚಣ (3) ಮತ್ತು ಧನ್‍ರಾಜ್ (2) ಮೃತ ದುರ್ದೈವಿಗಳು. ಘಟನೆಯಲ್ಲಿ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಒಂದೇ ಕುಟುಂಬದ 6 ಮಂದಿ ಇಬ್ಬರು ಮಕ್ಕಳೊಂದಿಗೆ ಸ್ಕಾರ್ಪಿಯೋ ಕಾರಿನಲ್ಲಿ ತಿರುಪತಿ ವೆಂಕಟರಮಣನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿಕೊಂಡು ಮರಳಿ ಸೊಲ್ಲಾಪುರಕ್ಕೆ ಹಿಂದಿರುಗುತ್ತಿದ್ದರು. ತಡರಾತ್ರಿ ಸಾವಳಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಕಾರು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ನ್ನೂ ಮೂವರಿಗೆ ಗಂಭೀರವಾಗಿ ಗಾಯಗಳಾಗಿದೆ.

ಈ ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ಮುಂದಿನ ಕ್ರಮ ಜರುಗಿಸಿದ್ದಾರೆ.