ಬೆಂಗಳೂರು,ಫೆ.13- ನಾಳೆಯಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕಲ್ಪಿಸಿ ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಗೃಹ ಸಚಿವ ಅರಗ ಜ್ಞಾನೇಂದ್ರ ಎಲ್ಲ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಭಂಗವಾಗದಂತೆ ಮತ್ತು ವಿವಾದಗಳು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ವಿಶೇಷವಾಗಿ ಪೊಲೀಸರ ಜೊತೆ ಶಸ್ತ್ರಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಹೆಚ್ಚಿನ ಭದ್ರತೆಯನ್ನು ಮಾಡಲಾಗುತ್ತಿದೆ. ಈಗಾಗಲೇ ಮಂಗಳೂರು ಹಾಗೂ ಬಾಗಲಕೋಟೆಯಲ್ಲಿ ಶಾಲೆಗಳಲ್ಲಿ ನಡೆದ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಆಯಾ ಶಾಲಾ ಆಡಳಿತಕ್ಕೆ ಕ್ಷೇತ್ರ ಶಿಕ್ಷಣಾಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಇನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಗರ ಪ್ರದೇಶಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಆಯಾ ತಹಸೀಲ್ದಾರ್‍ಗಳು ಭದ್ರತೆಯನ್ನು ನೋಡಿಕೊಳ್ಳಲಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ ಸ್ಥಳೀಯರಲ್ಲದೆ ಹೊರಗಿನಿಂದ ಬರುವವರನ್ನು ನಿರ್ಬಂಧಿಸಲಾಗುತ್ತಿದೆ.
ಒಟ್ಟಾರೆ ಕಾನೂನು ಸುವ್ಯಸ್ಥೆಯನ್ನು ಕಾಪಾಡುವ ದೃಷ್ಟಿಯಲ್ಲಿ ರಾಜ್ಯ ಸರ್ಕಾರ ಎಲ್ಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ನಾಳೆ ಶಾಲೆಗಳು ಆರಂಭಗೊಂಡು ಸುಸೂತ್ರವಾಗಿ ನಡೆಯಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಹಿಜಾಬ್ ವಿವಾದ ಮತ್ತೆ ತಲೆದೋರದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.
ಮುಂದಿ ಫೆ.15ರವರೆಗೆ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳು ಬಂದ್ ಆಗಿರುವ ಕಾರಣ ಪರೀಕ್ಷೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಶಾಲೆಗಳನ್ನು ತೆರೆಯಲು ಸಿದ್ದತೆ ಮಾಡಿಕೊಂಡಿದೆ. ಅಶಾಂತಿ ಸೃಷ್ಟಿಸುವವರನ್ನು ಯಾವುದೇ ಮುಲಾಜಿಲ್ಲದೆ ಬಂಸಲು ಸೂಚನೆ ಕೂಡ ನೀಡಲಾಗಿದೆ.
