ಬೆಂಗಳೂರು,ಆ.22- ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರಿಸುವ ಲಕ್ಷಣಗಳಿದ್ದು, ಮುಂದಿನ ಐದು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಅದೇ ರೀತಿ ದಕ್ಷಿಣ ಒಳನಾಡಿನ ಭಾಗದಲ್ಲಿ ಮುಂದಿನ ಎರಡು ದಿನಗಳ ನಂತರ ಅಂದರೆ ಆ.23ರ ನಂತರ ಮಳೆ ಮುಂದುವರಿಯುವ ಲಕ್ಷಣಗಳು ಇವೆ. ಆ.24 ಹಾಗೂ ಆ.25ರಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದ್ದು, ಇಷ್ಟು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಗಾಗ ಹಗುರ ಮಳೆ, ಕೆಲವೊಮ್ಮೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಆದರೆ ಈ ಭಾಗದಲ್ಲಿ ಮಳೆ ಅಬ್ಬರ ಅಷ್ಟಾಗಿ ಕಂಡು ಬರುವುದಿಲ್ಲ ಎಂದು ಅಂದಾಜಿಸಲಾಗಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಕರಾವಳಿ ಭಾಗ ಉಡುಪಿ ಜಿಲ್ಲೆಯಲ್ಲಿ ಅಧಿಕ ಮಳೆ ದಾಖಲಾಗಿದೆ.
ಈ ಪೈಕಿ ಉಡುಪಿಯಲ್ಲಿ 11ಸೆಂ.ಮೀ, ಕಾರ್ಕಳ ಮತ್ತು ಕೋಟಾದಲ್ಲಿ ತಲಾ 8ಸೆಂ.ಮೀ, ಪಣಂಬೂರು, ಶಿರಾಲಿಯಲ್ಲಿ ತಲಾ 5ಸೆಂ.ಮೀ, ಬೆಳ್ತಂಗಡಿ, ಕುಂದಾಪುರ, ಹೊನ್ನಾವರ, ಶೃಂಗೇರಿಯಲ್ಲಿ ತಲಾ 4ಸೆಂ.ಮೀ. ಮಳೆ ಬಿದ್ದಿದೆ. ಉಳಿದೆಡೆ ತುಂತುತು ಮಳೆ ಬಿದ್ದಿದೆ ಎಂದು ರಾಜ್ಯ ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಅಲ್ಲಲ್ಲಿ ಮುಂಗಾರು ಮಳೆ ಆರ್ಭಟ ಶುರುವಾಗಿದ್ದರೂ ರಾಯಚೂರಿನಲ್ಲಿ 32.4ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ. ಅದೇ ರೀತಿ ಮೈಸೂರಿನಲ್ಲಿ 31.8ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 31.1ಡಿಗ್ರಿ ಸೆಲ್ಸಿಯಸ್, ಮಂಡ್ಯದಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಮಡಿಕೇರಿಯಲ್ಲಿ ಮಾತ್ರ ಅತ್ಯಂತ ಕನಿಷ್ಠ ತಾಪಮಾನ 17.5ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.