ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ, ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

ಬೆಂಗಳೂರು, ಏ.21- ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ವಾಗಲಿದೆ. ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,84,255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. 6,00,519 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 21,928 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಈಗಾಗಲೇ ಘೋಷಣೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು. ಯಾವುದೇ ಧಾರ್ಮಿಕ ವಸ್ತ್ರ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ಪಾರದರ್ಶಕ ಪರೀಕ್ಷೆ ನಡೆಸುವ ಉದ್ದೇಶದಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಸರ್ಕಾರ ಮತ್ತು ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಬಸ್‍ನಲ್ಲಿ ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ತಮ್ಮ ಹಾಲ್‍ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ಬಾರಿ ಸರಳ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ರಾಮಚಂದ್ರನ್ ಮನವಿ ಮಾಡಿಕೊಂಡಿದ್ದಾರೆ.

ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡುವುದಿಲ್ಲ. ಎಲ್ಲ ವಿದ್ಯಾರ್ಥಿಗಳು ನಿಯಮ ಪಾಲನೆ ಮಾಡಿ ಅತ್ಯುತ್ತಮವಾಗಿ ಪರೀಕ್ಷೆ ಬರೆಯುವಂತೆ ಅವರು ಮನವಿ ಮಾಡಿದರು.