Tuesday, May 28, 2024
Homeರಾಜ್ಯರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮೂರು ದಿನ ಮುಂದುವರಿಕೆ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮೂರು ದಿನ ಮುಂದುವರಿಕೆ

ಬೆಂಗಳೂರು, ಮೇ12- ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಮೇ 15ರ ವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದೂವರೆ ಕಿ.ಮೀ.ಎತ್ತರದಲ್ಲಿ ನಿರ್ಮಾಣಗೊಂಡಿರುವ ಪರಿಣಾಮ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಮಳೆ, ಗಾಳಿ ಹೆಚ್ಚಾಗಿದ್ದು, ಮರ, ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ತೀವ್ರ ಬಿಸಿಲಿನ ಬೇಗೆಯಿದ್ದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲೂ ಮಳೆ ಆರಂಭಗೊಂಡಿದೆ. ಇದರಿಂದ ತಾಪಮಾನ ತಗ್ಗುತ್ತಿದೆ. ಸರಾಸರಿ ಇನ್ನೂ ಒಂದು ವಾರ ಮಳೆ ಮುಂದುವರೆಯುವ ಲಕ್ಷಣವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಈಗಾಗಲೇ ಬಿದ್ದಿರುವ ಮಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚಳವಾಗಿದ್ದ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿರುವುದು ಕಂಡುಬಂದಿದೆ. ನಿರಂತರ ಮಳೆಯಿಂದಾಗಿ ವಾತಾವರಣದಲ್ಲೂ ಆದ್ರ್ರತೆ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ.

ಮಾರ್ಚ್ ಮತ್ತು ಏಪ್ರಿಲ್‍ನಲ್ಲಿ ಕೈ ಕೊಟ್ಟಿದ್ದ ಪೂರ್ವ ಮುಂಗಾರು ಮಳೆ ಮೇ ತಿಂಗಳಲ್ಲಿ ಆರಂಭವಾಗಿರುವುದು ರೈತರು ಹಾಗೂ ಜನರಲ್ಲಿ ಆಶಾಭಾವನೆ ಮೂಡಿಸಿದೆ. ಈ ತಿಂಗಳಲ್ಲಿ ವಾಡಿಕೆ ಪ್ರಮಾಣ ಮತ್ತು ಅದಕ್ಕಿಂತ ಹೆಚ್ಚಾದರೆ, ಬೇಸಾಯಕ್ಕೂ ಅನುಕೂಲವಾಗುವುದಲ್ಲದೆ, ಕಾಡು ಪ್ರಾಣಿಗಳ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ನಿವಾರಣೆಗೂ ಅನುಕೂಲವಾಗಲಿದೆ.

RELATED ARTICLES

Latest News