ಎಸ್‍ಸಿ/ಎಸ್‍ಟಿ ಮೀಸಲಾತಿ ಹೆಚ್ಚಳ ಕೇಂದ್ರಕ್ಕೆ ಶಿಫಾರಸ್ಸು

Social Share

ಬೆಳಗಾವಿ,ಡಿ.21- ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಾತಿ ಹೆಚ್ಚಿಸುವ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ನೇಮಕಾತಿ ಅಥವಾ ಹುದ್ದೆಯಲ್ಲಿ ಮೀಸಲಾತಿ 2022) ವಿಧೇಯಕವನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ತೀರ್ಮಾನವನ್ನು ತೆಗೆದುಕೊಂಡಿದೆ.

ಈಗಾಗಲೇ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ಉಭಯ ಸದನಗಳಲ್ಲಿ ಚರ್ಚೆಯಾದ ನಂತರ ರಾಜ್ಯ ಸರ್ಕಾರ ವಿಧೇಯಕವನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದೆ. ನಾಳೆ ವಿಧೇಯಕದ ಕುರಿತು ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಚರ್ಚೆ ನಡೆಸಲಿದ್ದಾರೆ. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೂಡಲಿದ್ದಾರೆ.

ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕಾದರೆ ಸಂಸತ್‍ನಲ್ಲಿ ಚರ್ಚೆಯಾಗಿ ನಂತರ ಸಂವಿಧಾನದ ಪರಿಚ್ಛೇಧ 9ಕ್ಕೆ ತಿದ್ದುಪಡಿಯಾಗಬೇಕು. ನಂತರವೇ ಮೀಸಲಾತಿ ಹೆಚ್ಚಳದ ಆದೇಶ ಅಧಿಕೃತವಾಗಿ ಹೊರಬೀಳಲಿದೆ. ಈಗ ರಾಜ್ಯ ಸರ್ಕಾರ ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಪ್ರಮಾಣ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3ರಿಂದ 7ರಷ್ಟು ಹೆಚ್ಚಿಸಲು ಸುಗ್ರೀವಾಜ್ಞೆ ಮೂಲಕ ವಿಧೇಯಕ ಜಾರಿ ಮಾಡಿತ್ತು.

ಈ ಕಾಯ್ದೆಯು ಊರ್ಜಿತವಾಗಬೇಕಾದರೆ ಕೇಂದ್ರ ಸರ್ಕಾರವೇ ತಿದ್ದುಪಡಿ ಮಾಡಬೇಕು. ಪ್ರತಿಪಕ್ಷಗಳು ಕೂಡ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಈ ಹಿಂದೆ ಒತ್ತಾಯ ಮಾಡಿದ್ದವು. ಕೇಂದ್ರದ ಸಂಸತ್‍ನಲ್ಲಿ ಮಾತ್ರ ಈ ಮಸೂದೆಯಾದರೆ ಪರಿಶಿಷ್ಟ ಜಾತಿ/ವರ್ಗದವರಿಗೆ ಮೀಸಲಾತಿ ಹೆಚ್ಚಳವಾಗಲಿದೆ. ಪ್ರಸ್ತುತ ಇದೀಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರಕ್ಕೆ ಶಿಫಾರಸ್ಸು ಮಾಡದಿದ್ದರೆ ಪ್ರತಿಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ಮೇಲೆ ಮುಗಿಬೀಳುವ ಸಾಧ್ಯತೆ ಇದೆ ಎಂಬುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನಗಂಡಿದ್ದಾರೆ.

ಇತ್ತೀಚೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ತಾಕತ್ತಿದ್ದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಹೆಚ್ಚಳ ಮಾಡುವ ವಿಧೇಯಕವನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಎಂದು ಸವಾಲು ಹಾಕಿದ್ದರು.

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಿಸಲು ತೀರ್ಮಾನ ತೆಗೆದುಕೊಂಡಿತ್ತು. ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕಾದರೆ ಅಂತಿಮವಾಗಿ ಕೇಂದ್ರ ಸರ್ಕಾರ ತೀರ್ಮಾನ ಮಾಡಬೇಕಾಗಿರುವುದರಿಂದ ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಚೀನಾ ಗಡಿ ಗಲಾಟೆ ಚರ್ಚೆಗೆ ಕಾಂಗ್ರೆಸ್ ಪಟ್ಟು : ಸಂಸತ್ ಭವನದೆದುರು ಪ್ರತಿಭಟನೆ

ಊರ್ಜಿತವಾಗಲಿದೆಯೇ?:
ರಾಜ್ಯ ಸರ್ಕಾರ ಶಿಫಾರಸ್ಸು ಮಾಡುವ ಈ ವಿಧೇಯಕವನ್ನು ಕೇಂದ್ರ ಸರ್ಕಾರ ಸಂಸತ್‍ನಲ್ಲಿ ಚರ್ಚಿಸಿ ಊರ್ಜಿತ ಮಾಡಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಏಕೆಂದರೆ ರಾಜ್ಯಸಭೆಯಲ್ಲಿ ಸಂಸದರೊಬ್ಬರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಕೇಂದ್ರ ಸರ್ಕಾರ, ಮೀಸಲಾತಿ ಹೆಚ್ಚಿಸುವ ಅಥವಾ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿತ್ತು.

ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠ ಕೂಡ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಿರಬಾರದೆಂದು ತೀರ್ಪು ನೀಡಿತ್ತು. ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು.

ಈ ಬೆಳವಣಿಗೆಗಳ ನಡುವೆಯೇ ಮಹಾರಾಷ್ಟ್ರದಲ್ಲಿ ಮರಾಠರು, ರಾಜಸ್ಥಾನದಲ್ಲಿ ರಜಪೂತರು, ಹರಿಯಾಣದಲ್ಲಿ ಜಾಟರು ಸಮುದಾಯದವರಿಗೆ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಳ ಮಾಡುವ ವಿಧೇಯಕವನ್ನು ಉಭಯ ಸದನಗಳಲ್ಲಿ ಅಂಗೀಕರಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಕೆಲವರು ಸುಪ್ರೀಂಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆಂಧ್ರಪ್ರದೇಶದಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ ಕಲ್ಪಿಸುವ ಮಾಜಿ ಮುಖ್ಯಮಂತ್ರಿ ದಿವಂಗತ ರಾಜಶೇಖರ ರೆಡ್ಡಿ ಅವರು ತೆಗೆದುಕೊಂಡಿದ್ದ ನಿರ್ಧಾರವನ್ನು ಸುಪ್ರೀಂಕೋರ್ಟ್ ಅನೂರ್ಜಿತಗೊಳಿಸಿತ್ತು.

ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ಥರನ್ನು ಮರೆತ ಸರ್ಕಾರ : ಕಾಂಗ್ರೆಸ್ ಕಿಡಿ

ಇದೀಗ ರಾಜ್ಯ ಸರ್ಕಾರ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡುವ ವಿಧೇಯಕವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದರೆ ಸಂಸತ್‍ನಲ್ಲಿ ಅಂಗೀಕರಿಸಿ ಈ ವಿಧೇಯಕಕ್ಕೆ ಕಾನೂನಿನ ಮಾನ್ಯತೆ ನೀಡಲಿದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

Karnataka, Scheduled Castes, Scheduled Tribes, Reservation,

Articles You Might Like

Share This Article