Tuesday, September 23, 2025
Homeರಾಜ್ಯಸೆ 26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ "ಕಾವೇರಿ ಆರತಿ"

ಸೆ 26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ “ಕಾವೇರಿ ಆರತಿ”

"Kaveri Aarti" to be held at KRS for 5 days from September 26

ಬೆಂಗಳೂರು: ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಕೆಆರ್ ಎಸ್ ನಲ್ಲಿ ಸೆಪ್ಟೆಂಬರ್ 26 ರಿಂದ ಆಯೋಜನೆಯಾಗಿದೆ.

ಶುಕ್ರವಾರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಜಲ‌ ಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವರಿ ಸಚಿವ ಎನ್. ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ.

- Advertisement -

ಪತ್ರಿಕಾ ಹೇಳಿಕೆ ನೀಡಿರುವ ಅವರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ಕೆ.ಎನ್.ಉದಯ್, ದರ್ಶನ್ ಪುಟ್ಟಣ್ಣಯ್ಯ, ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ನೀರಾವರಿ ನಿಗಮದ ಅಧಿಕಾರಿಗಳು ಪಾಲ್ಗೊಳ್ಳುವರು.

ಹಿನ್ನೆಲೆ:
ಕೊಡಗಿನಲ್ಲಿ ಹುಟ್ಟಿ, ಕೃಷ್ಣರಾಜ ಸಾಗರದಲ್ಲಿ ನಿಂತು ಮಂಡ್ಯ, ಮೈಸೂರು, ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಡಿಯುವ ನೀರು, ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿರುವ ಕಾವೇರಿ ನದಿ, ತಮಿಳುನಾಡಿನ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೇಸಾಯ ಹಾಗೂ ಕುಡಿಯುವ ನೀರಿಗೆ ಕಾರಣೀಭೂತವಾಗಿ ಪಾಂಡಿಚೇರಿ ಮುಖಾಂತರ ಅರಬ್ಬಿ ಸಮುದ್ರದಲ್ಲಿ ಲೀನವಾಗುತ್ತದೆ.

ಗಂಗೆಯಷ್ಟೇ ಪಾವಿತ್ರ್ಯ ಹೊಂದಿರುವ ಕಾವೇರಿ ನದಿಗೆ ಕಾವೇರಿ ಆರತಿ ಮಾಡಿ ಭಕ್ತಿ ಭಾವದಿಂದ ನಮಿಸಿ ಪೂಜಿಸಬೇಕೆಂಬುದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2024ರಲ್ಲಿ ಕೆಆರ್ ಎಸ್ ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಡಿಸಿಎಂ ಅವರು ಈ ವಿಷಯವನ್ನು ಘೋಷಣೆ ಮಾಡಿದ್ದರು‌. ಅದರಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರ ನೇತೃತ್ವದ ಶಾಸಕರ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿಯನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಪ್ರಕಾರ ಸರ್ಕಾರ ಕಾವೇರಿ ಆರತಿ ಮಾಡಲು ತೀರ್ಮಾನಿಸಿ, ಸುಮಾರು 10 ಸಾವಿರ ಜನರು ಭವ್ಯ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾದ ಬೃಹತ್ ಸ್ಟೇಡಿಯಂ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿತು.

ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್ ಎಸ್ ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಒಳ್ಳೆಯದಾಗಲಿ, ರಾಜ್ಯಕ್ಕೆ ಸನ್ಮಂಗಳವಾಗಲಿ ಎಂದು ತಾಯಿ ಕಾವೇರಿಯಲ್ಲಿ ಪೂಜೆ ಮಾಡಿ ಪ್ರಾರ್ಥಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಕಾವೇರಿ ಆರತಿಯ ವಿಧಿ ವಿಧಾನಗಳು
*13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ.
*ಮೊದಲು “ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆ ಪ್ರಾರಂಭ.
*ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ, ಸಂಕಲ್ಪ.‌
*ಕಾವೇರಿ ಸ್ತೊತ್ರದ ಮೂಲಕ ತೀರ್ಥಕ್ಕೆ ಪೂಜೆ, ಬಾಗಿನ ಅರ್ಪಣೆ.
*ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ, ಚಾಮರ ಸೇವೆ.
*ಮೂರು ದಿಕ್ಕಿಗೂ ಶಂಖನಾದ, ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ
*ಕೊನೆಯಲ್ಲಿ ಕುಂಭಾರತಿ, ನಾಗಾರತಿ, ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ..

RELATED ARTICLES

Latest News