ಬೆಂಗಳೂರು,ಫೆ.8- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಕಾಲೇಜುಗಳನ್ನು ಒಂದು ವಾರಗಳ ಕಾಲ ಮುಚ್ಚಿಸಿ, ಪರಿಸ್ಥಿತಿ ತಿಳಿಯಾಗುವವರೆಗೂ ಆನ್‍ಲೈನ್ ತರಗತಿಗಳನ್ನು ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬರುವವರೆಗೂ ಕಾಯಬೇಕು. ಸಮಾಜದಲ್ಲಿ ಶಾಂತಿ ಕಾಪಾಡಲು ಒಂದು ಕಠಿಣ ತೀರ್ಮಾನ ಕೈಗೊಳ್ಳಬೇಕು. ನಮ್ಮ ದೇಶವನ್ನು ಇಡೀ ವಿಶ್ವ ನೋಡುತ್ತಿದೆ. ಇಂತಹ ಗೊಂದಲ, ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿದರು.
ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು ಕೂಡ ಶಾಲೆ-ಕಾಲೇಜುಗಳನ್ನು ವಾರ ಕಾಲ ಮುಚ್ಚಿ, ಪರಿಸ್ಥಿತಿ ತಿಳಿಯಾಗಲು ಸಹಕರಿಸಬೇಕು. ವಿದ್ಯಾರ್ಥಿಗಳು ಯಾವುದೇ ಪ್ರಚೋದನೆಗೆ ಒಳಗಾಗಬಾರದು. ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದು ವಿನಂತಿಸಿದರು.
ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿ ಕಾಪಾಡಲು ನಮ್ಮ ಹಿರಿಯರು ಎಷ್ಟು ತ್ಯಾಗ ಬಲಿದಾನ ಮಾಡಿದ್ದಾರೆ ಎಂಬುದನ್ನು ನಾವು ನಮ್ಮ ಪಾಠಗಳಲ್ಲಿ ಓದಿ, ಕಲಿತಿದ್ದೇವೆ. ನಮ್ಮ ದೇಶದ ಐಕ್ಯತೆ ಸಮಗ್ರತೆಗೆ ನಮ್ಮ ಅನೇಕ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಸರ್ಕಾರ ರಚನೆಯಾದ ಮೇಲೆ ಸಂವಿಧಾನ ನೀಡಿದ್ದು, ಅದು ಹಾಗೂ ನಮ್ಮ ರಾಷ್ಟ್ರ ಧ್ವಜ ನಮ್ಮ ಧರ್ಮ ಎಂದರು.
