ಬೆಂಗಳೂರು,ಸೆ.25- ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ನಾಳೆ ನೀಡಿರುವ ಬೆಂಗಳೂರು ಬಂದ್ ಕರೆಗೆ ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಆದರೆ, ದೈನಂದಿನ ಬಸ್ ಸೌಲಭ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಂದಿನಂತೆ ನಾಳೆಯೂ ಬಸ್‍ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ರಾಮನಗರ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ. ಯಥಾರೀತಿ ಬಸ್ ಸೌಲಭ್ಯವನ್ನು ಪ್ರಯಾಣಿಕರಿಗೆ ಕಲ್ಪಿಸುವುದಾಗಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.
ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್
ಆದರೆ ಫೆಡರೇಶನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ. ಅವರು ಪತ್ರಿಕಾ ಪ್ರಕಟಣೆ ನೀಡಿ, ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಎಂಟಿಸಿಯ ಎಲ್ಲಾ ಘಟಕಗಳಲ್ಲಿಯೂ ಯಾವುದೇ ಬಸ್‍ಗಳನ್ನು ಘಟಕದಿಂದ ಹೊರತೆಗೆಯದೆ ಬಂದ್‍ಗೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ನೌಕರರಿಗೂ ಕರೆ ನೀಡಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಈಗಾಗಲೇ ವಿವಿಧ ಸಂಘಟನೆಗಳು ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿವೆ.
ಹೀಗಾಗಿ ಬಂದ್ ಹಿನ್ನೆಲೆಯಲ್ಲಿ ನಾಳೆ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಾಸವಾದರೂ ಅಚ್ಚರಿಪಡಬೇಕಿಲ್ಲ.