ಈಡೇರದ ಬೇಡಿಕೆ, ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

Social Share

ಬೆಂಗಳೂರು,ಜ.23- ನಮ್ಮ ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗಿ ಸಾರ್ವಜನಿಕರಿಗೆ ಬಿಸಿತಟ್ಟುವ ಸಾಧ್ಯತೆ ಇದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳು ನಾಳೆ ಪ್ರತಿಭಟನೆ ನಡೆಸಲಿದ್ದಾರೆ.
ಬಸ್ ಡಿಪೋಗಳ ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ಕಚೇರಿ ಮುಂಭಾಗ ಮತ್ತು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ.

ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಮಾಡಿಲ್ಲ. ನಿಯಮದಂತೆ 2020ರ ಮಾರ್ಚ್‍ನಲ್ಲೇ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ ಸರಕಾರ ಇದುವರೆಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ. ಹೀಗಾಗಿ, ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಪ್ರತಿಭಟನೆ ಮುಂದಾಗಿದ್ದೇವೆ ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ಎಂದು ಹೇಳಿದ್ದಾರೆ.

ವೇತನ ಹೆಚ್ಚಳ, ವಜಾಗೊಂಡ ನೌಕರರನ್ನು ಮರುಸೇರ್ಪಡೆಗೊಳಿಸುವುದು ಮತ್ತು ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರತಿಭಟನಾಕಾರರು ಒತ್ತಾಯಿಸಲಿದ್ದಾರೆ. ಪ್ರತಿಭಟನೆಗೆ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಹಾಗೂ ಇತರೆ ಸಂಘಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ಇದರಿಂದ ಬಸ್ ಸಂಚಾರಕ್ಕೆ ತೊಂದರೆಯಾಗುವುದಿಲ್ಲ ಎಂದು ಒಕ್ಕೂಟಗಳು ಸ್ಪಷ್ಟಪಡಿಸಿವೆ.

ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡುತ್ತಲೇ ಬಂದಿದ್ದೇವೆ. ಸಾರಿಗೆ ಸಚಿವ ಬಿ.ಶ್ರೀ ರಾಮುಲು ಅವರು ಹಲವು ಬಾರಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಬೇಡಿಕೆ ಈಡೇರಿಲ್ಲ. ನಮ್ಮ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇತನ ಪರಿಷ್ಕರಣೆ, ಕೆಲಸದ ಅವಯನ್ನು ಕಡಿತಗೊಳಿಸುವುದು, ಎಲ್ಲಾ ಕಾರ್ಮಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವುದು, ನೌಕರರ ವಿರುದ್ಧ ದಾಖಲಾಗಿರುವ ಎಫ್‍ಐಆರ್‍ಗಳನ್ನು ಹಿಂಪಡೆಯುವುದು ಮತ್ತು ವಜಾಗೊಂಡ ನೌಕರರನ್ನು ಮರುನೇಮಕಗೊಳಿಸುವುದು ಸೇರಿದಂತೆ 14 ಬೇಡಿಕೆಗಳ ಪಟ್ಟಿಯನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಪ್ರಮುಖವಾಗಿ ಫ್ರೀಡಂಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದರೆ, ಇತರರು ಕರ್ನಾಟಕದಾದ್ಯಂತ ತಮ್ಮ ವಿಭಾಗೀಯ ಕೇಂದ್ರಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ನಮ್ಮ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಭರವಸೆ ಮರೆತ ಸರಕಾರ: ವೇತನ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021ರ ಏಪ್ರಿಲ್‍ನಲ್ಲಿ 15 ದಿನಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಆ ವೇಳೆ ಸರಕಾರ ಹಲವು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿತ್ತು. ಆದರೆ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಸರಕಾರವನ್ನು ಎಚ್ಚರಿಸಲು ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ಸಾರಿಗೆ ಯೂನಿಯನ್ ಪದಾಕಾರಿಗಳು ತಿಳಿಸಿದ್ದಾರೆ.

Articles You Might Like

Share This Article