ಮೈಸೂರು, ನ.7- ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣುಚಿಕೊಳ್ಳುವ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು ಮನಸು ಮಾಡಿದರೆ ಇದು ಅತ್ಯಂತ ಚಿಕ್ಕ ವಿಚಾರ. ಕೆಲವು ನಿಮಿಷಗಳಲ್ಲಿ ಬಗೆಹರಿಸಬಹುದಾದ ವಿಷಯ ಇದಾಗಿದೆ ಎಂದರು.
ಮುಖ್ಯಮಂತ್ರಿಗಳು ಪ್ರತಿಯೊಂದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಹೇಳಿ? ಎಂದು ಪ್ರಶ್ನಿಸಿದರು.
ಈ ಸಮಸ್ಯೆ ವಿಚಾರದಲ್ಲಿ ಜನ ಪ್ರತಿನಿಧಿಗಳನ್ನು ಕರೆದು ಮಾತನಾಡುವುದು ಏನಿದೆ? ಮುಖ್ಯಮಂತ್ರಿಗಳೇ ನೇರವಾಗಿ ನಿರ್ಧಾರ ಕೈಗೊಳ್ಳಬಹುದು. ನೇರವಾಗಿ ಬೆಳೆಗಾರರ ಜತೆ ಮಾತನಾಡಿ ಬಿಕ್ಕಟ್ಟನ್ನು ಬಗೆಹರಿಸಬಹುದು. ಅದನ್ನು ಮಾಡದೇ ಕೇವಲ ರಾಜಕೀಯ ಮಾಡುವುದರಲ್ಲಿ ಈ ಸರಕಾರ ಮುಳುಗಿದೆ ಎಂದು ಅವರು ಟೀಕಿಸಿದರು.
ಮುಖ್ಯಮಂತ್ರಿ ನೇರವಾಗಿ, ಮುಕ್ತವಾಗಿ ಕಬ್ಬು ಬೆಳೆಗಾರರ ಪರವಾಗಿ ನಿರ್ಧಾರ ತೆಗೆದುಕೊಳ್ಳಬಹುದು.ಆ ಕೆಲಸ ಮಾಡುವುದು ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಬೆಳಗಾವಿಯ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಕ್ಕರೆ ಲಾಬಿಯ ಒತ್ತಡಕ್ಕೆ ಅವರು ಮಣಿದಿರುವ ಸಾಧ್ಯತೆ ಇದೆ. ಅಂತಹ ಒತ್ತಡಕ್ಕೆ ಮಣಿಯದೆ ಮೊದಲು ಬೆಳೆಗಾರರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯ ಮಾಡಿದರು.
ಜೆಡಿಎಸ್ ನಾಯಕರು ಸಕ್ಕರೆ ಕಾರ್ಖಾನೆ ಹೊಂದಿಲ್ಲ: ಬೆಳಗಾವಿಯ ಜಿಲ್ಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಆಗಿದ್ದನ್ನು ಗಮನಿಸಿದ್ದೇನೆ. ಜೆಡಿಎಸ್ ಪಕ್ಷದ ಯಾವ ನಾಯಕ ಕೂಡ ಕಬ್ಬು ಕಾರ್ಖಾನೆ ಹೊಂದಿಲ್ಲ. ಆ ಪೈಕಿ ಬಂಡೆಪ್ಪ ಕಾಶಂಪೂರ ಅವರ ಕಾರ್ಖಾನೆ ಒಂದಿತ್ತು. ಕೆಲವು ದಿನಗಳ ಹಿಂದೆ ಅವರು ಅದನ್ನು ಕೂಡ ಮಾರಿದ್ದಾರೆ. ಹೀಗಾಗಿ ನಮ ಪಕ್ಷದಲ್ಲಿ ಯಾರೊಬ್ಬರ ಬಳಿಯೂ ಸಕ್ಕರೆ ಕಾರ್ಖಾನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಹಾಗೂ ನವೆಂಬರ್ ಕ್ರಾಂತಿ ಬಗ್ಗೆ ಗಮನ ಸೆಳೆದಾಗ, ನವೆಂಬರ್ನಲ್ಲಿ ಯಾವ ಕ್ರಾಂತಿಯೂ ಆಗಲ್ಲ ವಾಂತಿಯೂ ಆಗಲ್ಲ. ಸಿದ್ದರಾಮಯ್ಯ ಅವರು ನಮ ಪಕ್ಷದಲ್ಲೇ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇನೆ. ಹೀಗಾಗಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವಾಗಲೂ ದೇವರ ಜೊತೆ ಮಾತನಾಡುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾನೋ ನಮಗೇನು ಗೊತ್ತು? ಅದೇನಿದ್ದರೂ ಡಿ.ಕೆ. ಶಿವಕುಮಾರ್ ಹಾಗೂ ದೇವರಿಗೆ ಸಂಬಂಧಪಟ್ಟ ವಿಚಾರ. ಹಾಗಂತ ಡಿಕೆಶಿ ಅವರೇ ಹೇಳಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಬರಲಿದೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರ ಪ್ರತಿಕ್ರಿಯಿಸಿದ ಅವರು, 10, 20 ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. 2028ಕ್ಕೆ ಏನೇನಾಗುತ್ತೋ ಯಾರಿಗೆ ಗೊತ್ತು ಬಿಡಿ ಎಂದು ಲೇವಡಿ ಮಾಡಿದರು.
ಡಿಕೆಶಿ ಮೇಲಿನ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ. ಅಲ್ಲಿ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಎನ್ನುತ್ತಿದ್ದಾರೆ. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ. ಇವರು ಸುಮನೆ ಕಾಲಹರಣ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಹೆಚ್ಡಿಕೆ ಹೇಳಿದರು.
