ಬೆಂಗಳೂರು, ಜ.21– ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್. ಕೆ.ಅತೀಕ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಜ.31ರಂದು ಅತೀಕ್ ಅವರು ವಯೋನಿವೃತ್ತಿ ಹೊಂದಲಿದ್ದು, ಅವರನ್ನು ಫೆಬ್ರವರಿ ಒಂದರಿಂದ ಜಾರಿಗೆ ಬರುವಂತೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಅತೀಕ್ ಅವರ ನಿವೃತ್ತಿಯಿಂದ ತೆರವಾಗುವ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.