ಬೆಂಗಳೂರು,ಡಿ.11-ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದು ಅಮಾನವೀಯ. ರಕ್ಷಣೆ ನೀಡಬೇಕಾದ ಆರಕ್ಷಕರ ಈ ರೀತಿಯ ಮೃಗೀಯ ವರ್ತನೆ ತೋರಿರುವುದು ಖಂಡನೀಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆ ಹೇಡಿತನದ ಕೃತ್ಯ ಎಂದು ಜೆಡಿಎಸ್ ಟೀಕಿಸಿದೆ.
ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ, ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆದನ್ನು ಬಿಟ್ಟು ಸರ್ವಾಧಿಕಾರಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿಗಳ ಮೇಲೆ ಲಾಠಿ ಪ್ರಯೋಗಿಸಿ ದಮನಕಾರಿ ನೀತಿ ಅನುಸರಿಸಿದೆ ಎಂದು ಆರೋಪಿಸಿದೆ.
ಸುವರ್ಣ ವಿಧಾನಸೌಧದ ಎದುರು 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಸರ್ಕಾರ, ಪೊಲೀಸರನ್ನು ಬಳಸಿ ಬಲ ಪ್ರಯೋಗ ಮಾಡಿರುವುದು ನಾಚಿಕೆಗೇಡು ಎಂದಿದೆ.
ಪ್ರತಿಭಟನಾಕಾರರನ್ನು ಬೆನ್ನಟ್ಟಿ ರಕ್ತ ಬರುವಂತೆ ಪೊಲೀಸರು ಲಾಠಿಯಿಂದ ಹೊಡೆದಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ತೊಘಲಕ್ ಆಡಳಿತಕ್ಕೆ ಸಾಕ್ಷಿ. ಕಾಂಗ್ರೆಸ್ ಸರ್ಕಾರದ ಕೃಪಾ ಪೋಷಿತ ಲಾಠಿ ಏಟಿನ ದೌರ್ಜನ್ಯ ಮತ್ತು ದಬ್ಬಾಳಿಕೆಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದೆ.ಕೇಳಿದ್ದು ಮೀಸಲಾತಿ ಕಾಂಗ್ರೆಸ್ ಸರ್ಕಾರ ಕೊಟ್ಟಿದ್ದು ಲಾಠಿ ಏಟು ಎಂದು ಜೆಡಿಎಸ್ ವ್ಯಂಗ್ಯವಾಡಿದೆ.