ಬೆಂಗಳೂರು,ಮಾ.22- ಬೇಸಿಗೆಯ ಬಿಸಿಲು ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡು, ಕರ್ನಾಟಕ ಹಾಗೂ ಮಹಾರಾಷ್ಟ್ರದವರೆಗೆ ಟ್ರಪ್ ನಿರ್ಮಾಣವಾಗಿರುವುದರಿಂದ ಭಾಗಶಃ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ.
ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ದಕ್ಷಿಣ ಒಳನಾಡು ಹಾಗು ಮಲೆನಾಡಿನ ಕೆಲವು ಭಾಗಗಳಲ್ಲಿ ಮಿಂಚು ಗುಡುಗಿನ ವಾತಾವರಣ ಸೃಷ್ಟಿಯಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಚದುರಿದಂತೆ ಮಳೆಯಾಗುವುದು ವಾಡಿಕೆ. ಆದರೆ ವ್ಯಾಪಕ ಪ್ರಮಾಣದ ಮಳೆಯಾಗುವುದಿಲ್ಲ. ಕಳೆದ ಮೂರು ತಿಂಗಳಿನಿಂದಲೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಮಾರ್ಚ್ ಅಂತ್ಯದವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಒಂದೆರಡು ಕಡೆ ಅತ್ಯಲ್ಪ ಪ್ರಮಾಣದ ಮಳೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ಏಪ್ರಿಲ್ ಮೊದಲ ವಾರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು ಎಂದರು. ಸದ್ಯಕ್ಕೆ ವಾಯುಭಾರ ಕುಸಿತ, ಚಂಡಮಾರುತ ಉಂಟಾಗುವಂತಹ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾದ್ಯಂತ ಒಣಹವೆ ಮುಂದುವರೆಯು ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದರು.