Wednesday, May 1, 2024
Homeರಾಜ್ಯಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ : ಇಲ್ಲಿದೆ ಡೀಟೇಲ್ಸ್

ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ : ಇಲ್ಲಿದೆ ಡೀಟೇಲ್ಸ್

ನವದೆಹಲಿ,ಮಾ.16- ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಈ ಬಾರಿಯೂ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಜೂನ್4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಮೊದಲ ಹಂತ 14 ಲೋಕಸಭಾ ಕ್ಷೇತ್ರಗಳಿಗೆ ಮಾ.28ರಂದು ಅಧಿಸೂಚನೆ ಹೊರಡಲಿದ್ದು, ಮಾ.28ರಿಂದ ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮೇ 5ರಂದು ನಾಮಪತ್ರಗಳ ಪರಿಶೀಲನೆ ನಡೆದು, ಏ.8ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎರಡನೇ ಹಂತದ ಮತದಾನ ನಡೆಯಲಿರುವ ಮೇ 7ರ 14 ಲೋಕಸಭಾ ಕ್ಷೇತ್ರಗಳಿಗೆ ಏ.12ರಂದು ಅಸೂಚನೆ ಹೊರಡಲಿದೆ. ಏ.12ರಿಂದ ಏ.19ರವರೆಗೆ ನಾಮಪತ್ರ ಸಲ್ಲಿಸಬಹುದು.

ಏ.20ರಂದು ನಾಮಪತ್ರಗಳ ಪರಿಶೀಲನೆ, ಏ.22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 7ಕ್ಕೆ 2ನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು – 5,37,85,815 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್‍ಕುಮಾರ್ ತಿಳಿಸಿದರು.

ಏ.26ರಂದು ಮೊದಲ ಹಂತದ ಮತದಾನವು ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು , ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮೇ 7ರಂದು ಎರಡನೇ ಹಂತದ ಮತದಾನವು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ,ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯಲಿದೆ.

ರಾಜ್ಯದ ಒಟ್ಟು ಮತದಾರರು 5,37,85,815
ಪುರುಷ -2,69,33,750
ಮಹಿಳಾ – 2,68,47,145
ಇತರೆ ಮತದಾರರು – 4,920
ಒಟ್ಟು ಮತಗಟ್ಟೆಗಳ ಸಂಖ್ಯೆ-58,834

RELATED ARTICLES

Latest News