ಬೆಂಗಳೂರು,ಆ.25- ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದು ಮಾಡಿರುವ ಹೈಕೋರ್ಟ್ ದ್ವಿಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸಿಬಿಯನ್ನು ರದ್ದುಪಡಿಸಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕೆಂಬ ನ್ಯಾಯಾಲಯ ನೀಡಿರುವ ತೀರ್ಪನ್ನು ಯಥಾವತ್ತಾಗಿ ಪಾಲಿಸಿ ಸುಪ್ರೀಂಕೋರ್ಟ್‍ಗೆ ಮನವಿ ಹಾಕದಿರಲು ಸಭೆ ತೀರ್ಮಾನಿಸಿದೆ.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ಎಸಿಬಿ ರದ್ದು ಮಾಡಿರುವುದನ್ನು ನ್ಯಾಯಾಲಯದಲ್ಲಿ ನಮ್ಮ ಸರ್ಕಾರ ಮೇಲ್ಮನವಿ ಅರ್ಜಿ ಹಾಕುವುದಿಲ್ಲ. ಬದಲಿಗೆ ಲೋಕಾಯುಕ್ತ ಸಂಸ್ಥೆಗೆ ಅಗತ್ಯವಿರುವ ಸಿಬ್ಬಂದಿ ನೇಮಕಾತಿ ವಿಚಾರಣೆಗೆ ಅನುಮತಿ ಸೇರಿದಂತೆ ಇತ್ಯಾದಿ ಹಲವು ಕ್ರಮಗಳನ್ನು ತೆಗದುಕೊಳ್ಳಲಿದೆ. ನ್ಯಾಯಾಲಯದಲ್ಲಿ ಹೈಕೋರ್ಟ್ ಆದೇಶದ ವಿರುದ್ಧ ಖಾಸಗಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಹಾಕಿರಬಹುದು. ಅದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಬಹುದಿನಗಳ ಬೇಡಿಕೆಯಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿಗಳನ್ನು ಪ್ರಾರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಬೀದರ್, ಹಾಸನ, ಕೊಡುಗು, ಕೊಪ್ಪಳ , ಬಾಗಲಕೋಟೆ ಜಿಲ್ಲೆಗಳಲ್ಲಿ ಸ್ನಾತಕೋತ್ತರ ವಿವಿಯು ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯ ವಿವಿ ಯ ವಿಸ್ತರಣೆಯನ್ನು ಜಿಲ್ಲಾ ಘಟಕಕ್ಕೆ ವಿಸ್ತರಣೆ ಮಾಡಲಾಗಿದೆ ಎಂದರು.
ಲೋಕಾಯುಕ್ತ ಸಂಸ್ಥೆಯಲ್ಲಿ ಒಟ್ಟು 10 ಸ್ಥಾನಗಳಿದ್ದವು. ಇದರಲ್ಲಿ 7 ಸ್ಥಾನಗಳು ಖಾಲಿ ಇತ್ತು. ಇವುಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಲ್ಲಿ ಲೋಕಾಯುಕ್ತ ವಕೀಲರು ಸೇರಿದಂತೆ ಮತ್ತಿತರ ಸಿಬ್ಬಂದಿ ಇರಲಿದ್ದಾರೆ ಎಂದು ಹೇಳಿದರು.
ವೈಟ್‍ಫೀಲ್ಡ್ ರೈಲ್ವೆ ನಿಲ್ದಾಣದ ಬಳಿ ಮೇಲ್ಸೇತುವೆ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಾಣ ಮಾಡಲು 24.27 ಕೋಟಿ ಅನುದಾನವನ್ನು ನೀಡಲಾಗಿದೆ. ಕೊಂಕಣ ರೈಲ್ವೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶೇ. 15ರಷ್ಟು ಪಾಲು ನೀಡಬೇಕಾಗಿದ್ದು,
ಸುಮಾರು 73.56 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಉತ್ತರ ತಾಲ್ಲೂಕಿನ ಚಿಕ್ಕಬಾಣವಾರದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ 3 ಎಕರೆ ಜಮೀನು ಮಂಜೂರಿಗೆ ಸಂಪುಟ ಸಭೆ ಅನುಮೋದನೆ ಕೊಟ್ಟಿದೆ. ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಮೆಕಾನಿಕಲ್ ಮತ್ತು ಚಾಲನೆ ತರಬೇತಿ ಕೇಂದ್ರ ನಿರ್ಮಾಣಕ್ಕೆ 15 ಕೋಟಿ ಅನುಮದೋನೆ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆಗೆ 190 ಕೋಟಿ ಬಿಡುಗಡೆ ಮಾಡಲಾಗಿದೆ. ಬಿಬಿಎಂಪಿಯ ಪಂಥರಪಾಳ್ಯದಲ್ಲಿ ಅರ್ಧಕ್ಕೆ ನಿಂತಿದ್ದ 150 ಹಾಸಿಗೆ ಸಾಮಥ್ರ್ಯವುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು.