Saturday, October 26, 2024
Homeರಾಜಕೀಯ | Politicsಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಲೋಕಾಯುಕ್ತ ನೋಟಿಸ್.!

ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ಲೋಕಾಯುಕ್ತ ನೋಟಿಸ್.!

Lokayukta notice likely to be issued to Siddaramaiah

ಬೆಂಗಳೂರು, ಅ.26- ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ಆಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ನೋಟೀಸ್ ನೀಡುವ ಸಾಧ್ಯತೆ ಇದೆ.

ಈ ಪ್ರಕರಣದಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಮೊದಲ ಆರೋಪಿಯಾಗಿರುವ ಹಿನ್ನಲೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಮುಂದಿನ ವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ಸಜ್ಜಾಗಿದ್ದಾರೆ. ಮುಡಾ ಕೇಸ್ನಲ್ಲಿ ಈಗಾಗಲೇ ಎ2, ಎ3 ಮತ್ತು ಎ4 ವಿಚಾರಣೆ ನಡೆಸಲಾಗಿದೆ. ಈಗ ಬಾಕಿ ಇರುವುದು ಎ1 ಆರೋಪಿ ವಿಚಾರಣೆ ಮಾತ್ರ. ಅಂದರೆ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಿದ್ದಾರೆ.

ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸುವುದು ಇಲ್ಲವೇ, ಬಂಧಿಸುವುದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೇಳಿತ್ತು. ಸಿದ್ದರಾಮಯ್ಯ ಅವರ ಮೇಲೆ ಆರೋಪ ಕೇಳಿ ಬಂದ ಕಾರಣ ವಿಚಾರಣೆಗೆ ಎದುರಾಗುವುದು ಅನಿವಾರ್ಯವಾಗಿದೆ.

ಒಂದು ವೇಳೆ ಲೋಕಾಯುಕ್ತ ಪೊಲೀಸರು ನೊಟೀಸ್ ಜಾರಿ ಮಾಡಿ, ವಿಚಾರಣೆಗೆ ಸಿದ್ದರಾಮಯ್ಯ ಹಾಜರಾದರೆ, ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ತನಿಖಾ ಸಂಸ್ಥೆ ಮುಂದೆ ಹಾಜರಾಗಬೇಕಾದ ಸಂದಿಗ್ಧ ಸ್ಥಿತಿ ಅವರದ್ದಾಗಿದೆ. ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಸಿಎಂಗೆ ನೋಟಿಸ್ ನೀಡಲು ಲೋಕಾಯುಕ್ತ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪತ್ನಿ ಪಾರ್ವತಿಯವರ ವಿಚಾರಣೆಯ ಟಿಪ್ಪಣಿ ಬರೆಯುತ್ತಿದ್ದಾರೆ. ಟಿಪ್ಪಣಿ ಕಾರ್ಯ ಮುಗಿದ ಮೇಲೆ ಸಿಎಂಗೆ ನೋಟಿಸ್ ನೀಡುವ ಸಾಧ್ಯತೆ ಇದೆ.

ಶುಕ್ರವಾರ ಮುಡಾ ಪ್ರಕರಣದಲ್ಲಿ ಸುಮಾರು 3 ಗಂಟೆಗಳ ಕಾಲ ಸಿಎಂ ಪತ್ನಿಯನ್ನು ಲೋಕಾಯುಕ್ತ ವಿಚಾರಣೆ ನಡೆಸಿತ್ತು. ಈ ವೇಳೆ ಹಲವಾರು ಪ್ರಶ್ನೆಗಳನ್ನು ಸಿಎಂ ಪತ್ನಿ ಮುಂದಿಟ್ಟು ಉತ್ತರ ಪಡೆಯಲಾಯಿತು. ಮತ್ತೊಂದೆಡೆ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಽಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಽಕಾರದ (ಮುಡಾ) ಆರು ಮಂದಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. 6 ಮಂದಿಗೂ ಒಂದೇ ದಿನ ವಿಚಾರಣೆ ಇರುವುದಿಲ್ಲ, ಬೇರೆ ಬೇರೆ ದಿನಾಂಕಗಳನ್ನು ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಇಡಿ ವಲಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.

ಸಮನ್ಸ್ ಪಡೆದ 6 ಮಂದಿ ನೌಕರರು ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಂದಿಗೆ ತರುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ಜಾರಿ ನಿರ್ದೇಶನಾಲಯ (ಇ.ಡಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಇದರ ಬೆನ್ನಲ್ಲೇ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಎರೆಡೆರೆಡು ಸಂಸ್ಥೆಗಳಿಂದ ತನಿಖೆ ಚುರುಕುಗೊಂಡಿದೆ.

ಏನಿದು ಪ್ರಕರಣ? :
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಡಾವಣೆ ನಿರ್ಮಾಣ ಮಾಡಲು ಪಡೆದ ಭೂಮಿಗೆ ಬದಲಾಗಿ ಬಡಾವಣೆ ಅಭಿವೃದ್ಧಿಪಡಿಸಿ, ಅದರಲ್ಲಿ ಭೂ ಮಾಲೀಕರಿಗೆ ಪುನಃ ನಿವೇಶನ ನೀಡುತ್ತದೆ. ಮುಡಾಕ್ಕೆ ಜಮೀನು ನೀಡಿದ ಭೂ ಮಾಲೀಕರಿಗೆ ಒದಗಿಸುವ ಬದಲಿ ನಿವೇಶನ (50: 50ರ ಅನುಪಾತ) ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪ ಇದೀಗ ಕೇಳಿ ಬಂದಿದೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧಿನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿತ್ತು.

ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರಲ್ಲಿರೋ 3 ಎಕರೆ 16 ಗುಂಟೆ ಜಾಗವನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನಸ್ವಾಮಿಯವರು ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ, ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998ರಲ್ಲಿ ಡಿ ನೋಟಿಸ್ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ. ವಿಷಯ ಏನೆಂದರೆ, ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2017ರಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿಪಡಿಸದ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಸಿಎಂ ಪತ್ನಿ ಪಾರ್ವತಿ 2021ರಲ್ಲಿ ಮತ್ತೊಂದು ಪತ್ರ ಬರೆದಿದ್ದರು. 50:50 ಅನುಪಾತದಲ್ಲಿ ಬದಲೀ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50 ಅನುಪಾತದಲ್ಲಿ ಭೂಮಿ ನೀಡಲಾಗಿದೆ ಎಂಬುದು ಆರೋಪವಿದೆ.

ಭೂಮಿ ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38ಸಾವಿರದ 284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ, 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪವಾಗಿದೆ.

RELATED ARTICLES

Latest News