ಬೆಂಗಳೂರು,ಜ.25- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಮೇಲೆ ಬಂದಿದ್ದ ಆರೋಪದ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದು, ವರದಿಯನ್ನುಇಂದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಹಂಚಿಕೆ ಕುರಿತು ನಡೆದಿರುವ ಅಕ್ರಮದ ಬಗ್ಗೆ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು 3 ಸಾವಿರ ಪುಟಗಳಿಗೂ ಹೆಚ್ಚಿನ ವರದಿಯನ್ನು ಸಿದ್ಧಪಡಿಸಿದ್ದು, ಲೋಕಾಯುಕ್ತ ಎಸ್ಪಿ ಉದೇಶ್ ಅವರು ಲೋಕಾಯುಕ್ತ ಎಡಿಜಿಪಿ ಅವರಿಗೆ ವರದಿಯನ್ನು ಸಲ್ಲಿಸಲಿದ್ದು, ಅವರು ಪರಿಶೀಲಿಸಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ನೀಡಲಿದ್ದಾರೆ.
ಸಿಎಂ ಕುಟುಂಬದ ಕೆಸರೆಯ ಭೂಹಗರಣ ಸೇರಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಶೇ.50:50 ಅನುಪಾತದ ನಿವೇಶನಗಳ ಹಂಚಿಕೆ ಕುರಿತು ಲೋಕಾಯುಕ್ತ ಪೊಲೀಸರು ಸಮಗ್ರ ತನಿಖೆ ನಡೆಸಿದ್ದು, ಮುಡಾ ಕಚೇರಿ ಎಲ್ಲಾ ದಾಖಲಾತಿಗಳನ್ನು ಸಂಗ್ರಹಿಸಿ ಮಾಹಿತಿಗಳನ್ನು ಕ್ರೋಢೀಕರಿಸಿ ವರದಿಯನ್ನು ಸಿದ್ಧಪಡಿಸಿದ್ದಾರೆ. ಈ ವರದಿ ಇಂದು ನ್ಯಾಯಾಲಯಕ್ಕೆ ಸಲ್ಲಿಕೆಯಾಗಲಿದೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರು ನಿವೇಶನ ಪಡೆದಿರುವುದು ರಾಜ್ಯ ಹಾಗೂ ದೇಶಾದ್ಯಂತ ಸುದ್ದಿಯಾಗಿತ್ತು. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈ ಬಗ್ಗೆ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಪೊಲೀಸರಿಗೆ, ರಾಜ್ಯಪಾಲರಿಗೆ ದೂರು ನೀಡಿದ್ದರು.
ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಇದನ್ನು ಆಕ್ಷೇಪಿಸಿ ಸಿಎಂ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯ ಸಿಎಂ ಮನವಿಯನ್ನು ನಿರಾಕರಿಸಿ ಲೋಕಾಯುಕ್ತ ತನಿಖೆಗೆ ಆದೇಶಿಸಿ ಸಮಗ್ರ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ನೀಡಬೇಕೆಂದು ಆದೇಶಿಸಿತ್ತು. ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ.