ಬೆಂಗಳೂರು, ಡಿ.21– ಅತಿವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಗರದ ಬಿಐಟಿ ಕಾಲೇಜಿನ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ, ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ ಒಬ್ಬ ಬಿಇ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ನಾಲ್ವರು ವಿದ್ಯಾರ್ಥಿಗಳು ನಗರದ ಬಿಐಟಿ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದು, ಪ್ರಾಜೆಕ್ಟ್ ವರ್ಕ್ ಹಾಗೂ ಪ್ರವಾಸಕ್ಕಾಗಿ ತಲಕಾಡಿಗೆ ಇಂದು ಮಧ್ಯಾಹ್ನ 12.15ರ ಸುಮಾರಿನಲ್ಲಿ ಕಾರಿನಲ್ಲಿ ಹೋಗುತ್ತಿದ್ದರು.
ಮಳವಳ್ಳಿ ತಾಲ್ಲೂಕಿನ ಚನ್ನೇಗೌಡನದೊಡ್ಡಿ ಕ್ರಾಸ್ ಬಳಿ ಅತಿ ವೇಗವಾಗಿ ಬಂದ ಲಾರಿಯೊಂದು ಕೆಎಸ್‌ಆರ್‌ಟಿಸಿ ಬಸ್‌ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.