ಬೆಂಗಳೂರು,ಮಾ.7- ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ನಿನ್ನೆ ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಸಿದರು.
ಎನ್‍ಡಿಎ ಅಭ್ಯರ್ಥಿಯಾಗಿ ಪುಟ್ಟರಾಜು ಅವರನ್ನು ಸ್ಪರ್ಧೆಗಿಳಿಸಿದರೆ ಗೆಲುವಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಗಿದೆ. ಆದರೆ ಅಭ್ಯರ್ಥಿ ಯಾರೆಂಬುದನ್ನು ಇನ್ನೂ ಅಧಿಕೃತವಾಗಿ ತೀರ್ಮಾನ ಮಾಡಿಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಡವೂ ಇದೆ.
ಸಭೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಯಾರನ್ನು ಸ್ಪರ್ಧೆಗಿಳಿಸಬೇಕು, ಚುನಾವಣೆ ಸಿದ್ಧತೆ ಹೇಗಿರಬೇಕು ಎಂಬ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಸಭೆಯಲ್ಲಿ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಅವರು ಭಾಗವಹಿಸಿದ್ದರು. ಮಂಡ್ಯ ಜಿಲ್ಲೆಯ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಎಲ್ಲರ ಅಭಿಪ್ರಾಯವನ್ನು ಕುಮಾರಸ್ವಾಮಿಯವರು ಪಡೆದುಕೊಂಡಿದ್ದಾರೆ.
ಅಭ್ಯರ್ಥಿ ಆಯ್ಕೆ ಕಗ್ಗಂಟು : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಗೊಂದಲ
ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡು ವುದಾಗಿ ಕುಮಾರಸ್ವಾಮಿ ಸಭೆಗೆ ತಿಳಿಸಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕು. ಮೈತ್ರಿ ಧರ್ಮ ಪಾಲಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಲೋಪಕ್ಕೆ ಅವಕಾಶ ಮಾಡಿಕೊಡಬಾರದು ಎಂದು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಎನ್‍ಡಿಎ ಅಭ್ಯರ್ಥಿ ಪರ ಕೆಲಸ ಮಾಡಿ ನಾನು ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡುತ್ತೇನೆ. ಅವರ ಪರವಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬ ಕಿವಿಮಾತು ಹೇಳಿದ್ದಾರೆ.