ಮೈಸೂರು,ಫೆ.20- ಉದಯಗಿರಿ ಪೊಲೀಸ್ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೌಲ್ವಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಸ್ತಾಕ್ ಮಕ್ಟೋಲಿ ಬಂಧಿತ ಮೌಲ್ವಿ. ಈ ಮೌಲ್ವಿ ಯನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಕಳೆದ 11 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ರಿಕ್ತರ ಗುಂಪು ಉದಯಗಿರಿ ಪೊಲೀಸ್ ಠಾಣೆ ಬಳಿ ಜಮಾಯಿಸಿ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿ ದಾಂದಲೆ ನಡೆಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿತ್ತು.
ಉದಯಗಿರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಗಲಾಟೆ ಮಾಡುತ್ತಿದ್ದ ಸಂದರ್ಭದಲ್ಲಿ ಈ ಮೌಲ್ವಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಕಲ್ಲು ತೂರಾಟ ಪ್ರಕರಣದ ನಂತರ ನಾಪತ್ತೆಯಾಗಿದ್ದ ಮೌಲ್ವಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಮೌಲ್ವಿ ವಿರುದ್ಧ ಗಲಭೆಗೆ ಪ್ರಚೋದನೆ, ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ, ಅಕ್ರಮ ಕೂಟ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಇನ್ನಿತರರ ಪ್ರಕರಣಗಳನ್ನು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ 16 ಮಂದಿಯನ್ನ ಪೊಲೀಸರು ಬಂಧಿಸಿ ಉಳಿದವರಿಗಾಗಿ ಶೋಧ ನಡೆಸುತಿದಾರೆ.