ರಾಜೀನಾಮೆಗೆ ಮುಂದಾದ ಎಂ.ಬಿ.ಪಾಟೀಲ್..?

MB-Patil-01
ಬೆಂಗಳೂರು, ಜೂ.6-ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಎಂ.ಬಿ.ಪಾಟೀಲ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸ್ಪೀಕರ್ ರಮೇಶ್‍ಕುಮಾರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲು ಸಮಯಾವಕಾಶ ಕೋರಿದ್ದು, ಖುದ್ದಾಗಿ ಅಥವಾ ಬೆಂಬಲಿಗರ ಮುಖಾಂತರ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ಅಂದರೆ ಮಧ್ಯಾಹ್ನ 1.15 ರ ಹೊತ್ತಿಗೆ ಸ್ಪೀಕರ್ ಅವರನ್ನು ಭೇಟಿ ಮಾಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಪಕ್ಷಕ್ಕಾಗಿ ಸಮುದಾಯವನ್ನೇ ಎದುರು ಹಾಕಿಕೊಂಡು ಕೆಲಸ ಮಾಡಿದ್ದೇನೆ. ನನಗೆ ದ್ರೋಹ ಮಾಡಿದ್ದಾರೆ ಎಂದು ಅಸಮಾಧಾನಗೊಂಡಿರುವ ಎಂ.ಬಿ.ಪಾಟೀಲ್, ನಾನು ಯಾರ ಮನೆ ಬಾಗಿಲಿಗೂ ಹೋಗಿ ಅಂಗಲಾಚುವುದಿಲ್ಲ. ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಕಾರ್ಯಕರ್ತರು ಬೇಸರ ಮಾಡಿಕೊಳ್ಳುವುದು ಬೇಡ ಎಂದು ತಿಳಿಸಿದ್ದಾರೆ.

ಅಧಿಕಾರ ಅಥವಾ ರಾಜಕೀಯ ನಮ್ಮ ಮನೆಯ ಆಸ್ತಿಯಲ್ಲ. ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಕಾರಣ ಗೊತ್ತಾಗಿಲ್ಲ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷಯ ತಿಳಿದುಕೊಳ್ಳುತ್ತೇನೆ ಎಂದಿದ್ದಾರೆ.
ಈ ಮಧ್ಯೆ ಬೆಂಗಳೂರಿನ ಎಂ.ಬಿ.ಪಾಟೀಲ್ ನಿವಾಸದ ಮುಂದೆ ಅಪಾರ ಸಂಖ್ಯೆಯ ಕಾರ್ಯಕರ್ತರು ಜಮಾಯಿಸಿದ್ದರು.

Sri Raghav

Admin