ಬೆಂಗಳೂರು, ಮಾ.9-ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಮೆಡಿಕಲ್ ಸೀಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಎಂಬಿಬಿಎಸ್ ವ್ಯಾಸಂಗಕ್ಕಾಗಿ ದೂರದ ಉಕ್ರೇನ್‍ಗೆ ತೆರಳಿದ್ದ ಸಾವಿರಾರು ವಿದ್ಯಾರ್ಥಿಗಳು ಯುದ್ಧಪೀಡಿತ ರಾಷ್ಟ್ರದಿಂದ ವಾಪಸ್ಸಾಗಿರುವ ಹಿನ್ನಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಮೆಡಿಕಲ್ ಸೀಟ್ ಏರಿಕೆ ಮಾಡಲು ವೈದ್ಯಕೀಯ ನಿರ್ದೇಶನಾಲಯ ನಿರ್ಧರಿಸಿದೆ.
ರಾಜ್ಯದ ವಿದ್ಯಾರ್ಥಿಗಳು ಎಂಬಿಬಿಎಸ್ ಮಾಡಲು ಹೊರ ದೇಶಗಳಿಗೆ ವಲಸೆ ಹೋಗುತ್ತಿರುವುದು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಉಕ್ರೇನ್‍ನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
ಉಕ್ರೇನ್‍ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳಿಗೆ ಯಾವ ರೀತಿ ಅವರ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂಬ ಬಗ್ಗೆಯೂ ವೈದ್ಯಕೀಯ ಪರಿಷತ್ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ.
ರಾಜ್ಯದಲ್ಲಿರುವ ಮೆಡಿಕಲ್ ಕಾಲೇಜ್‍ಗಳ ಮೂಲ ಸೌಕರ್ಯ ಹೆಚ್ಚಳ ಮಾಡಿ ಇಲ್ಲಿನ ವಿದ್ಯಾರ್ಥಿಗಳು ಹೊರ ದೇಶಗಳಿಗೆ ತೆರಳದಂತೆ ಕಡಿವಾಣ ಹಾಕುವುದರ ಜೊತೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಮೆಡಿಕಲ್ ಸೀಟ್‍ಗಳ ಸಂಖ್ಯೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
