ಬೆಂಗಳೂರು, ಜ.4- ಹಲವು ಅಡ್ಡಿ ಆತಂಕಗಳ ನಡುವೆಯೂ ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಪಾದಯಾತ್ರೆ ಯಶಸ್ವಿಗೊಳಿಸಲು ಕಾಂಗ್ರೆಸ್ ಪಣತೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡೀ ದಿನ ಪಾದಯಾತ್ರೆಯ ಕುರಿತಂತೆ ರಚಿಸಲಾಗಿರುವ ಹಲವು ಸಮಿತಿಗಳ ಜತೆ ಸಮಾಲೋಚನೆ ನಡೆಸಿದರು.
ಪ್ರಚಾರ ಸಮಿತಿ, ಆಹಾರ ಸಮಿತಿ, ಸಾರಿಗೆ ಸಮಿತಿ, ಮಾಧ್ಯಮ ಸಮಿತಿ, ಧಾರ್ಮಿಕ ಹಾಗೂ ಇತರ ಸಮುದಾಯಗಳ ಸಮಿತಿಯ ಜತೆಗೆ ಸಭೆಗಳನ್ನು ನಡೆಸಿ ಚರ್ಚಿಸಿದರು. ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರನ್ನು ಒಳಗೊಂಡ ರಾಜ್ಯ ಮಟ್ಟದ ನಿಗಾವಣೆ ಸಮಿತಿ ಸಭೆ ನಡೆಯಲಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಇದರಲ್ಲಿ ಭಾಗವಹಿಸಲಿದ್ದಾರೆ.
ಪಾದಯಾತ್ರೆ ಘೋಷಣೆಯಾದ ದಿನದಿಂದಲೂ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ದುಗುಡಗಳು ಶುರುವಾಗಿವೆ. ರಾಜಕೀಯ ಭದ್ರಕೋಟೆಯನ್ನು ಸುರಕ್ಷಿತವಾಗಿಟ್ಟುಕೊಳ್ಳಲು ನಾನಾ ರೀತಿಯ ತಂತ್ರಗಾರಿಕೆ ನಡೆಸುತ್ತಿವೆ. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಬಲಿಷ್ಠವಾದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂಬ ಆತಂಕದಿಂದ ಆಡಳಿತಾರೂಢ ಕಾಂಗ್ರೆಸ್ ಹಲವಾರು ರೀತಿಯ ತಂತ್ರಗಾರಿಕೆಗಳ ಮೊರೆ ಹೋಗಿದೆ.
ನಿನ್ನೆ ರಾಮನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ವೇದಿಕೆಯಲ್ಲೇ ನಡೆದ ಸಂಸದರು-ಸಚಿವರ ನಡುವಿನ ಗದ್ದಲವು ಮೇಕೆದಾಟು ಯೋಜನೆಯ ಪಾದಯಾತ್ರೆಗೆ ಅಡ್ಡಿತರುವ ಹುನ್ನಾರ ಎಂಬ ಆರೋಪ ಕೇಳಿ ಬಂದಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಮೂಲಕ ಪಾದಯಾತ್ರೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ.
ಇಂದು ಸಂಜೆ ಮುಖ್ಯಮಂತ್ರಿಯವರು ತಜ್ಞರ ಜತೆ ಸಮಾಲೋಚನೆ ನಡೆಸಲಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಸರ್ಕಾರದಿಂದ ಎದುರಾಗುವ ಅಡ್ಡಿ-ಆತಂಕಗಳನ್ನು ಮೀರಿ ಪಾದಯಾತ್ರೆ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಹೀಗಾಗಿ ಒಗ್ಗಟ್ಟಿನ ಮಂತ್ರ ಜಪಿಸಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಎಲ್ಲಾ ನಾಯಕರಿಗೂ ಸೂಚನೆ ರವಾನೆಯಾಗಿದೆ.
