ಬೆಂಗಳೂರು,ಜ.24-ರಾಜ್ಯದ ಸ್ಮಾರ್ಟ್ ಸಿಟಿ ಕಾಮಗಾರಿ ದೇಶದಲ್ಲಿಯೇ ಅತ್ಯಂತ ವೇಗವಾಗಿ ನಡೆಯುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು. ರಾಜ್ಯದ 7 ಸ್ಮಾರ್ಟ್ ಸಿಟಿಗಳಾದ ಶಿವಮೊಗ್ಗ, ಮಂಗಳೂರು, ಬೆಂಗಳೂರು, ತುಮಕೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸ್ಮಾರ್ಟ್ ಸಿಟಿಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2020ರ ಫೆಬ್ರವರಿ ವೇಳೆಗೆ ರೂ.855 ಕೋಟಿ ರೂಪಾಯಿಗಳ ಕಾಮಗಾರಿಗಳು ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೆ ರೂ. 2646 ಕೋಟಿ ರೂಪಾಯಿಗಳ ಕಾಮಗಾರಿಗಳು ನಡೆದಿವೆ ಎಂದರು.
ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಇದರ ಬಗ್ಗೆ ನಾನೇ ಖುದ್ದು ಪರಿಶೀಲನೆ ನಡೆಸುತ್ತೇನೆ ಎಂದು ಅವರು ತಿಳಿಸಿದರು. ರಾಜ್ಯದ 7 ಸ್ಮಾರ್ಟ್ ಸಿಟಿಗಳ ಎಲ್ಲಾ ಕಾಮಗಾರಿಗಳು 2023ರ ಜುಲೈ ಅಂತ್ಯಕ್ಕೆ ಮುಗಿಯಬೇಕು ಎಂದು ಕೇಂದ್ರ ಸರ್ಕಾರ ಗಡುವು ನೀಡಿದೆ. ಆದರೆ ನಮ್ಮ ನಗರಾಭಿವೃದ್ಧಿ ಇಲಾಖೆ 2023ರ ಮಾರ್ಚ್ ಅಂತ್ಯಕ್ಕೆ ಮುಗಿಸುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ನಗರಾಭಿವೃದ್ಧಿ ಸಚಿವನಾಗಿ ಅಧಿಕಾರ ವಹಿಸಕೊಂಡ ಮೇಲೆ ರಾಜ್ಯದ ಸ್ಮಾರ್ಟ್ ಸಿಟಿಗಳ ಕಾಮಗಾರಿಗಳ ವೀಕ್ಷಣೆ ಮತ್ತು ಪ್ರಗತಿ ಪರಿಶೀಲನೆಗಾಗಿ ನಾನು ಪ್ರತಿ ನಗರಕ್ಕೆ 8-10 ಬಾರಿ ಭೇಟಿ ನೀಡಿದ್ದೇನೆ. ಕಾಮಗಾರಿಗಳ ವೇಗ ಹೆಚ್ಚಿಸಲು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದೇನೆ. ಕಾಮಗಾರಿಗಳ ಗುಣಮಟ್ಟ ಕಾಪಾಡಲು ಕೆಲಸ ಮಾಡುತ್ತಿದೆ. ಇದರ ಜೊತೆಗೆ ಪ್ರತಿ ತಿಂಗಳು ನಾನು ಪರಿಶೀಲನಾ ಸಭೆ ನಡೆಸುತ್ತಿದ್ದೇನೆ ಎಂದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳು ಟೆಂಡರ್ ಕರೆಯುವುದರಲ್ಲಿ ನಮ್ಮ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದೆ ಮತ್ತು ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವಲ್ಲಿ 4ನೇ ಸ್ಥಾನದಲ್ಲಿದೆ. ಕೊರೋನಾ ಸೋಂಕು, ಲಾಕ್ ಡೌನ್, ಕಾರ್ಮಿಕರ ವಲಸೆ/ಅಭಾವ ಹೀಗೆ 2 ವರ್ಷಗಳು ಸಮಸ್ಯೆ ಎದುರಿಸಿದ್ದರೂ, ಕಾಮಗಾರಿಗಳಿಗೆ ಹಣಕಾಸಿನ ವೆಚ್ಚ ಏರಿಕೆಯಾಗಿಲ್ಲ. ಬದಲಾಗಿ, ಕಾಮಗಾರಿಗಳು ಪೂರ್ಣಗೊಳ್ಳುವುದರ ಕಾಲಮಿತಿ ಹೆಚ್ಚಾಗಿತ್ತು. ಹೀಗಿದ್ದರೂ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಇತರೆ ನಾಲ್ಕು ಮಹಾನಗರಗಳಾದ ಮೈಸೂರು, ಬಳ್ಳಾರಿ, ಕಲಬುರಗಿ ಮತ್ತು ವಿಜಯಪುರವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಸೇರಿಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಇದರ ಜೊತೆಗೆ ಇತ್ತೀಚೆಗೆ ಉತ್ತರ ಪ್ರದೇಶದ ಲಕ್ನೋ ಗೆ ತೆರಳಿದ್ದ ವೇಳೆ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವರಾದ ಹರದೀಪ್ ಸಿಂಗ್ ಪುರಿ ಅವರೊಂದಿಗೂ ಚರ್ಚಿಸಿದ್ದೇನೆ ಎಂದು ತಿಳಿಸಿದರು.
ಪಕ್ಷದ ಕಾರ್ಯಕರ್ತನಾಗಿ ಕೆಲಸ: ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಸಿದಂತೆ ಪ್ರತಿಕ್ರಿಯಿಸಿದ ಸಚಿವರು ಅದು ಮುಖ್ಯಮಂತ್ರಿಗಳ ಪರಮಾಕಾರ. ಅದಕ್ಕೆ ಸಿಎಂ ಉತ್ತರ ನೀಡುತ್ತಾರೆ. ನನ್ನನ್ನು ಸಂಪುಟದಿಂದ ಕೈಬಿಟ್ಟರೂ ನಾನು ಪಕ್ಷದ ಸೂಚನೆಗೆ ಬದ್ದವಾಗಿರುತ್ತೇನೆ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲೂ ಪಕ್ಷದಡಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು. 17 ಜನರಲ್ಲಿ ಯಾರನ್ನೂ ಕೈಬಿಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಭೈರತಿ ಇದೇ ವೇಳೆ ಭರವಸೆ ವ್ಯಕ್ತಪಡಿಸಿದರು.
