ಯಾದಗಿರಿ,ಏ.16- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ಹಾಕಿಸದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಣ್ಣ ಕೈಗಾರಿಕೆಗಳ ಸಚಿವ ಶರಣಬಸಪ್ಪ ದರ್ಶನಾಪುರ್ ಆತಂಕ ವ್ಯಕ್ತಪಡಿಸಿದ್ದಾರೆ. ಯಾದಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡಿದ್ದೇವೆ.
ರಾಯಚೂರು, ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತ ಹಾಕಿಸದೇ ಇದ್ದರೆ ಬೆಂಗಳೂರಿಗೆ ಹೋಗಿ ಮುಖ ತೋರಿಸಲು ಆಗುವುದಿಲ್ಲ. ನಿಮ್ಮ ವಿಧಾನಸಭೆಯ ಚುನಾವಣೆಯನ್ನು ಹೆಚ್ಚಿನ ಮತದ ಅಂತರದಿಂದ ಗೆಲ್ಲಲು ಸಾಧ್ಯವಾಗುತ್ತದೆ. ಬೇರೆಯವರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಡಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಗಳು ನಮಗೆ ಎದುರಾಗುತ್ತವೆ. ಹೀಗಾಗಿ ನಾವಾಗಿಯೇ ಕುರ್ಚಿ ಬಿಡಬೇಕಾಗುತ್ತದೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯ ಜೊತೆಯಲ್ಲೆ ಸುರಪುರ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ್ ನಾಯಕ್ ಅವರನ್ನು ಗೆಲ್ಲಿಸಬೇಕು ಎಂದು ಇದೇ ವೇಳೆ ಅವರು ಮನವಿ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹಿನ್ನಡೆ ಅನುಭವಿಸಿದರೆ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ತಲೆದಂಡವಾಗಲಿದೆ ಎಂದು ಮೊದಲಿನಿಂದಲೂ ಹೇಳಲಾಗುತ್ತಿದೆ. ಅದಕ್ಕೆ ಪೂರಕವಾಗಿ ಶರಣಬಸಪ್ಪ ದರ್ಶನಾಪುರ್ ಹೇಳಿಕೆ ನೀಡಿದ್ದಾರೆ.