ಬೆಂಗಳೂರು,ಅ.15– ಮಹಿಳೆ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡುಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದು, ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.
ಪೊಲೀಸರ ತನಿಖೆಗೆ ಸಹಕಾರ ನೀಡುವುದು, ಸಾಕ್ಷಿಗಳನ್ನು ನಾಶಪಡಿಸದಿರುವುದು, ಸಾಕ್ಷ್ಯಾಧಾರರ ಮೇಲೆ ಪ್ರಭಾವ ಬೀರದಿರುವುದು, ಇಬ್ಬರ ಶ್ಯೂರಿಟಿ ಮೇಲೆ ಜಾಮೀನನ್ನು ಮಂಜೂರು ಮಾಡಿದ್ದಾರೆ.ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಎಸ್‌ಐಟಿ ಮುನಿರತ್ನ ಅವರನ್ನು ಬಂಧಿಸಿತ್ತು.
ತಮನ್ನು ಮುನಿರತ್ನ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು.
ನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಆದರೆ ಮಹಿಳೆ ನೀಡಿದ ದೂರಿನನ್ವಯ ಎಸ್‌ಐಟಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಬಂಧಿಸಿದ್ದರು.