ಬೆಂಗಳೂರು,ಅ.5- ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಕ್ಕೆ ಸಿಲುಕಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.ಇದರೊಂದಿಗೆ ಅವರು ಎರಡನೇ ಬಾರಿಗೆ ಜೈಲು ಪಾಲಾಗಿದ್ದಾರೆ.
ಕಳೆದ 10 ದಿನಗಳಿಂದ ವಿಶೇಷ ತನಿಖಾ ತಂಡ(ಎಸ್‌ಐಟಿ) ವಶದಲ್ಲಿದ್ದ ಮುನಿರತ್ನ ಅವರನ್ನು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್‌ಐಟಿ ಪೊಲೀಸರು ಮುನಿರತ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ವೇಳೆ ಮತ್ತೆ ವಶಕ್ಕೆ ನೀಡುವಂತೆ ಎಸ್‌ಐಟಿ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಲಯ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿತು. ತಕ್ಷಣವೇ ಮುನಿರತ್ನ ಅವರನ್ನು ಪೊಲೀಸರು ಪರಪ್ಪನ ಆಗ್ರಹಾರ ಜೈಲಿಗೆ ಕರೆದೊಯ್ದರು.
ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ನ್ಯಾಯಾಲಯ ಸೂಚಿ ಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿ ಎಂದು ವಕೀಲರಿಗೆ ಸೂಚಿಸಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
ಘಟನೆ ಸಂಬಂಧ ಆರ್.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ಮಾಡಿ ರುವುದಾಗಿ ಡಿವೈಎಸ್ಪಿ ದಿನಕರ್ ಶೆಟ್ಟಿ ಸಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.
ಶಾಸಕ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆ ಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಎರಡನೇ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಹಾಗೂ ಮಹಜರನ್ನು ಈಗಾಗಲೇ ನಡೆಸಿದೆ.
ದೂರುದಾರರಾಗಿರುವ ಮೊದಲ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಕೆಲ ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಎರಡನೇ ಸಂತ್ರಸ್ತೆಯು ಎಚ್‌ಐವಿ ಸೋಂಕಿತೆ ಎಂದು ಹೇಳಿಕೊಂಡಿದ್ದು, ಬಿಬಿಎಂಪಿ ಮಾಜಿ ಸದಸ್ಯೆಯೊಬ್ಬರ ಪತಿಯನ್ನು ಹನಿಟ್ರ್ಯಾಪ್ ಮಾಡಲು ಮುನಿರತ್ನ ಅವರು ನನ್ನನ್ನು ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದಕ್ಕೂ ಮೊದಲು ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.