ಬೆಂಗಳೂರು,ಮೇ 2-ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಸವಾಲನ್ನು ಸ್ವೀಕರಿಸಿರುವ ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ತಮ ಶಾಸಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿ ಪ್ರತಿ ಸವಾಲು ಹಾಕಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೆ ಬಸನಗೌಡ ಪಾಟೀಲ್ ಯತ್ನಾಳ್, ಉಗ್ರಾವತಾರದ ಮಾತುಗಳನ್ನಾಡುತ್ತಿದ್ದರು, ಈ ಹಂತದಲ್ಲಿ ಪ್ರತಿಕ್ರಿಯೆ ವೇಳೆ ಕಾಂಗ್ರೆಸ್‌ನ ಶಾಸಕರೊಂದಿಗೆ ಸಂಘರ್ಷಕ್ಕೆ ಇಳಿದಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಹಾಗೂ ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಯತ್ನಾಳ್ ಸವಾಲು ಹಾಕಿದ್ದರು.
ಇಬ್ಬರು ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆಗೆ ನಿಲ್ಲಲಿ, ಯಾರು ಗೆಲ್ಲುತ್ತಾರೋ ನೋಡೋಣ ಎಂದು ಸವಾಲು ಹಾಕಿದ್ದರು. ಅದಕ್ಕೆ ಪ್ರತಿಕ್ರಿಯೆ ಎಂಬಂತೆ ಶಿವಾನಂದ ಪಾಟೀಲ್ ಇಂದು ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶಿವಾನಂದ ಪಾಟೀಲ್ ತಮ ರಾಜೀನಾಮೆ ಪತ್ರದಲ್ಲಿ, ವಿಜಯಪುರ ನಗರ ಕ್ಷೇತ್ರದ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ್‌ರವರು ತಮ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ನನ್ನ ವಿರುದ್ಧ ಬಸವನಬಾಗೇವಾಡಿ ಮತ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.
ನಾನು ಅವರ ಸವಾಲನ್ನು ಸ್ವೀಕರಿಸಿ ಯತ್ನಾಳ್ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.
ಯತ್ನಾಳ್ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಸಭಾಧ್ಯಕ್ಷರಲ್ಲಿ ಕೋರಿದ್ದಾರೆ.
ಕಾನೂನಾತಕ ಪರಿಶೀಲನೆ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ವೈಯುಕ್ತಿಕ ನೆಲೆಗಟ್ಟು ಹಾಗೂ ಸ್ವಾಭಿಮಾನ ಹಿನ್ನೆಲೆಯಲ್ಲಿ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕರು ಮತ್ತು ಸಚಿವರು ತಮ ತಮ ಗೌರವದ ವಿಷಯದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.
ಶಿವಾನಂದ ಪಾಟೀಲ್ ಅವರು ರಾಜೀನಾಮೆ ಕೊಟ್ಟಿದ್ದಾರೆ. ನಾನು ಅದನ್ನು ಪಡೆದುಕೊಂಡಿದ್ದೇನೆ. ಕಾನೂನಾತಕವಾಗಿ ಹೇಗೆ ಇದನ್ನು ನೋಡಬೇಕು ಅನ್ನೋದನ್ನು ಪರಿಶೀಲಿಸುತ್ತೇನೆ ಎಂದು ಅವರು ಹೇಳಿದರು.
ವೈಯಕ್ತಿಕ ತೀರ್ಮಾನ:
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿದ್ದ ಸವಾಲನ್ನು ಸ್ವೀಕಾರ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಶಿವಾನಂದಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಂಗೀಕಾರವಾದರೆ ಮಾತ್ರ ನನ್ನ ರಾಜೀನಾಮೆಯನ್ನು ಅಂಗೀಕರಿಸುವಂತೆ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದೇನೆ.
ಸಭಾಧ್ಯಕ್ಷರು ಯತ್ನಾಳ್ ಅವರನ್ನು ಕರೆದು ವಿಚಾರ ಮಾಡಲಿ ಎಂದರು.
ವೈಯಕ್ತಿಕ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಯತ್ನಾಳ್ ಅವರ ಮೊಹಮದ್ ಪೈಗಂಬರ್ ಅವರ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ್ದನ್ನು ಖಂಡಿಸುತ್ತೇವೆ. ಯತ್ನಾಳ್ ವಿರುದ್ಧ ವಿಜಯಪುರದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ಯತ್ನಾಳ್ ಮಾತನಾಡಿ, ತೇಜೋವಧೆ ಮಾಡಿರುವುದನ್ನು ಖಂಡಿಸುತ್ತೇನೆ. ನನ್ನ ವಿರುದ್ಧ ಗೆಲ್ಲುವಂತೆ ಯತ್ನಾಳ್ ಸವಾಲು ಹಾಕಿದ್ದರು. ಆ ಸವಾಲನ್ನು ಸ್ವೀಕರಿಸಿದ್ದೇನೆ. ಶುಕ್ರವಾರದ ಗುಡುವು ನೀಡಿದ್ದರು. ಈಗ ಜನರೇ ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ. ನಾನು ಬಿಜೆಪಿ, ಜನತಾದಳ, ಕಾಂಗ್ರೆಸ್ ಮೂರು ಪಕ್ಷಗಳಿಂದಲು ಗೆದ್ದಿದೇನೆ ಎಂದು ಹೇಳಿದರು.