ಬೆಂಗಳೂರು,ಆ.1-ರಾಜ್ಯದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಗಳ ಖಾತೆ ಸಚಿವ ಡಾ.ಕೆ.ಸುಧಾಕರ್, ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಮಂಕಿ ಪಾಕ್ಸ್ ತಡೆಗಟ್ಟುವ ಕುರಿತು ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಮಂಕಿಪಾಕ್ಸ್ ರಾಜ್ಯಕ್ಕೆ ಅಧಿಕೃತವಾಗಿ ಬಂದಿಲ್ಲವಾದರೂ ನಿಯಂತ್ರಿಸಲು ಕೆಲವರು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ ನೀಡುವುದಾಗಿ ತಿಳಿಸಿದರು.
ಈಗಾಗಲೇ ಇಲಾಖೆ ಸಚಿವರಾದ ಡಾ.ಕೆ.ಸುಧಾಕರ್ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸದ್ಯಕ್ಕೆ ನಮ್ಮ ರಾಜ್ಯದಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ. ಆದರೂ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಸಭೆ ನಡೆಸಲಿದೆ ಎಂದರು.
ಅಧಿಕಾರಿಗಳು ನೀಡುವ ಮಾಹಿತಿ ನಂತರ ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಸೂಚನೆ ನೀಡಲಾಗುವುದು. ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ. ವದಂತಿಗಳಿಗೂ ಕಿವಿಗೊಡಬಾರದು ಎಂದು ಬೊಮ್ಮಾಯಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯದ ಕೆಲವು ಕಡೆ ಮತ್ತೆ ಮಳೆ ಆವರಿಸಿದ್ದು, ಪುನಃ ಮನೆ ಕುಸಿತ, ರೈತರ ಜಮೀನುಗಳು ನಾಶವಾಗಿವೆ. ನಾಳಿನ ಸಭೆಯಲ್ಲಿ ಮಳೆ ನಷ್ಟದ ಬಗ್ಗೆ ಚರ್ಚಿಸಿ ಪರಿಹಾರ ನೀಡುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.