Saturday, July 20, 2024
Homeರಾಜ್ಯರಾಜ್ಯದಲ್ಲಿ ಮತ್ತೆ ಪ್ರಬಲಗೊಂಡ ಮುಂಗಾರು, ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮತ್ತೆ ಪ್ರಬಲಗೊಂಡ ಮುಂಗಾರು, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು, ಜೂ.21-ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನೈರುತ್ಯ ಮುಂಗಾರು ಪ್ರಬಲವಾಗಿದ್ದು, ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಿದೆ. ವಾರಾಂತ್ಯಕ್ಕೆ ಮಳೆ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಈಗಾಗಲೇ ಹಳದಿ ಮುನ್ನೆಚ್ಚರಿಕೆ ನೀಡಿದ್ದು, ನಾಳೆಯಿಂದ ಮೂರು ದಿನ ಕೆಂಪು ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ನಾಳೆಯಿಂದ ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ. ಗಂಟೆಗೆ 30ರಿಂದ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಮತ್ತು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.

ಈಗಾಗಲೇ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಹಾಗೂ ರಾತ್ರಿ ವೇಳೆ ಮಳೆಯಾಗಲಿದೆ.

ಜೂನ್‌ ಒಂದರಿಂದ ಇದುವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.9 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ, ಹೆಚ್ಚು ಮಳೆಯಾಗುವ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಕ್ರಮವಾಗಿ ಶೇ.78 ಹಾಗೂ ಶೇ.84ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ನೆಚ್ಚರಿಕೆ ಇರುವ ಹಿನ್ನೆಲೆಯಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಾಗಲಿದ್ದು, ನದಿಪಾತ್ರಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

RELATED ARTICLES

Latest News