ಬೆಂಗಳೂರು,ಫೆ.17- ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮಲೀಯೂರು ಮತ್ತು ತಲಕಾಡು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮೂರು ತಿಂಗಳೊಳಗೆ ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.
ಶಾಸಕ ಅಶ್ವಿನ್‍ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಕಟ್ಟಡದ ಕಾಮಗಾರಿ ಮುಕ್ತಾಯ ಹಂತದಲ್ಲಿ ಇದೆ. ಆದರೆ, ಆಸ್ಪತ್ರೆಯಲ್ಲಿ ಸಿಬ್ಬಂದಿ ಮತ್ತು ಯಂತ್ರೋಪಕರಣಗಳ ಕೊರತೆ ಎದುರಾಗಿರುವುದರಿಂದ ವಿಳಂಬವಾಗಿದ್ದು, ಮೂರು ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದರು.
ಈ ಹಿಂದೆ ಸರ್ಕಾರಗಳು ಕೇವಲ ಆಸ್ಪತ್ರೆ ಕಟ್ಟಡಗಳನ್ನು ನಿರ್ಮಿಸಿ ಯಂತ್ರೋಪಕರಣ, ಇಲ್ಲವೇ ಸಿಬ್ಬಂದಿಯನ್ನು ನೇಮಕ ಮಾಡುತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಕಟ್ಟಡದ ಕಾಮಗಾರಿ ಜತೆಗೆ ಯಂತ್ರೋಪಕರಣ ಮತ್ತು ಸಿಬ್ಬಂದಿ ನೇಮಕಾತಿಗೂ ಆದ್ಯತೆ ಕೊಟ್ಟಿದೆ ಎಂದರು.
ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಕೆಎಸ್‍ಎಂಎಸ್‍ಸಿಎಲ್ ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶಾಸಕರ ಕೋರಿಕೆಯಂತೆ ಈ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಸಿಎಂಒ, ಶುಶ್ರೂಕರು, ಫಾರ್ಮಸಿಸ್ಟ್, ಪ್ರಯೋಗಶಾಲೆ ತಜ್ಞರು, ಗಣಕಯಮತ್ರ ತಜ್ಞರು ಹಾಗೂ ಗ್ರೂಪ್ ಡಿ ನೌಕರರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಸಿ.ಎನ್.ಬಾಲಕೃಷ್ಣ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಇಲ್ಲಿ ಪ್ರತಿನಿತ್ಯ ಒಳ ಮತ್ತು ಹೊರ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದೆ. ಜನಸಂಖ್ಯೆ ಹೆಚ್ಚಳವಾಗಿರುವುದರಿಂದ ಸರ್ಕಾರ ಇದನ್ನು ಸಾಕಾರಾತ್ಮಕವಾಗಿ ಪರಿಗಣಿಸಲಿದೆ ಎಂದರು.
