ಬೆಂಗಳೂರು, ಫೆ.9- ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.ವಿದ್ಯಾರಣ್ಯಪುರ ನಿವಾಸಿ ವಿಶ್ವನಾಥ್ ಅಲಿಯಾಸ್ ಕುಳ್ಳ ವಿಶ್ವ (39) ಕೊಲೆಯಾದ ವ್ಯಕ್ತಿ.ವಕೀಲರೊಬ್ಬರ ಕಚೇರಿಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ್ ಇಂದು ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಸ್ನೇಹಿತನನ್ನು ಭೇಟಿ ಮಾಡಲು ದ್ವಿಚಕ್ರ ವಾಹನದಲ್ಲಿ ನರಸಿಂಹಸ್ವಾಮಿ ಬಡಾವಣೆಗೆ ಬಂದಿದ್ದಾನೆ.
ಬೈಕ್ ನಿಲ್ಲಿಸಿ ಸ್ನೇಹಿತನ ಮನೆಗೆ ನಡೆದು ಹೋಗುತ್ತಿದ್ದಾಗ ಆಟೋದಲ್ಲಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ವಿಶ್ವನಾಥ್ ಕುತ್ತಿಗೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಅದೇ ಆಟೋದಲ್ಲಿ ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ನಂದಿನಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ.ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೊಲೆಯಾಗಿರುವ ವಿಶ್ವನಾಥ್ ಈ ಹಿಂದೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಂತಹ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
ಹಳೆ ದ್ವೇಷದಿಂದ ಈ ಕೊಲೆ ನಡೆದಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೊಲೆ ಆರೋಪಿಗಳು ಹಾಗೂ ಆಟೋ ಪತ್ತೆಗಾಗಿ ಕೃತ್ಯ ನಡೆದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
