ಮೈಸೂರು ದಸರಾ ಮೇಲೆ ಪಾಕ್ ಉಗ್ರರ ಕಣ್ಣು, ತೀವ್ರ ಕಟ್ಟೆಚ್ಚರ

ನವದೆಹಲಿ, ಸೆ.16-ನವರಾತ್ರಿ ಮತ್ತು ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಪಾಕಿಸ್ತಾನದ ಜೈಷ್-ಎ-ಮಹಮದ್(ಜೆಇಎಂ) ಉಗ್ರರು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಧಸಕ ಕೃತ್ಯಗಳನ್ನು ಎಸಗಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮೈಸೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ದೇವಸ್ಥಾನಗಳು, ಧಾರ್ಮಿಕ ಕ್ಷೇತ್ರಗಳು, ಪ್ರಸಿದ್ಧ ಪ್ರವಾಸಿ ತಾಣಗಳು, ಬಸ್ ಮತ್ತು ರೈಲು ನಿಲ್ದಾಣಗಳು, ಶಾಪಿಂಗ್ ಮಾಲ್‍ಗಳೂ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.  ನವರಾತ್ರಿ ಸಂದರ್ಭದಲ್ಲಿ ಉಗ್ರಗಾಮಿಗಳ ದಾಳಿ ಬೆದರಿಕೆ ಸಾಮಾನ್ಯವಾಗಿದ್ದರೂ, ಈ ಬಾರಿ ಇಂಥ ಮಾಹಿತಿಯನ್ನು ಲಘುವಾಗಿ ಪರಿಗಣಿಸದೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ನಂತರ ಪಾಕಿಸ್ತಾನ ಮತ್ತು ಆ ದೇಶದಿಂದ ಪೋಷಿಸಲ್ಪಡುತ್ತಿರುವ ಉಗ್ರಗಾಮಿಗಳು ಕುಪಿತಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ವಿಧ್ವಂಸಕ ದಾಳಿಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಕಳೆದ ಕೆಲವು ದಿನಗಳಿಂದಲೂ ಗುಪ್ತಚರ ಇಲಾಖೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮುನ್ನೆಚ್ಚರಿಕೆ ನೀಡುತ್ತಲೇ ಬಂದಿದೆ.

ನಿನ್ನೆ ಮಧ್ಯಾಹ್ನ ರೋಹ್ಟಕ್ ರೈಲು ನಿಲ್ದಾಣದ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಗೆ ಪತ್ರವೊಂದು ರವಾನೆಯಾಗಿದ್ದು, ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಸ್ಫೋಟ ಮತ್ತು ವಿಧ್ವಂಸಕ ಕೃತ್ಯಗಳನ್ನು ಎಸಗುವುದಾಗಿ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರ, ನವದೆಹಲಿ, ಗುಜರಾತ್, ಪಶ್ಚಿಮಬಂಗಾಳ, ಉತ್ತರಪ್ರದೇಶ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಭಾರತ ಮತ್ತು ಕರ್ನಾಟಕದಲ್ಲಿ ನವರಾತ್ರಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಈ ಬಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಫಕ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಭೂತಪೂರ್ವ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.