ಮೈಸೂರು,ಸೆ.28- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈಗಾಗಲೇ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು, ಅರಮನೆ ನಗರಿ ವರ್ಣರಂಜಿತ ಝಗಮಗಿಸುವ ಲೈಟಿಂಗ್‌ನಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ದಿನಾಂಕವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
ಮೈಸೂರು ದಸರಾ ಕಾರ್ಯಕ್ರಮ ವೇಳಾಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದ್ದು, ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ 9.15 ರಿಂದ 9.45 ರ ನಡುವೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಅ.3 ರಿಂದ 11 ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರು ನಡೆಯಲಿದ್ದು, 12 ರಂದು ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10 ರ ನಡುವೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆ ನಡೆಯಲಿದೆ. ಸಂಜೆ 4 ಗಂಟೆಯಿಂದ 4.30 ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂಸವಾರಿಗೆ) ಚಾಲನೆ ದೊರೆಯಲಿದೆ.
ಸಂಜೆ 7 ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕವಾಯತನ್ನು ಉದ್ಘಾಟಿಸಲಿದ್ದಾರೆ.ದಸರಾದ ಕೇಂದ್ರ ಬಿಂದು ಯುವ ದಸರಾವನ್ನು ಈ ಬಾರಿ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತರಂಗಮಂದಿರದಲ್ಲಿ ಆಯೋಜಿಸಲಾಗಿದ್ದು, ಪ್ರತಿದಿನ ಸಂಜೆ 5 ಗಂಟೆಯಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಇತರ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದಸರಾ ಅಧಿಕೃತ ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಯಲ್ಲಿ ಮಾಹಿತಿ ಪಡೆಯಬಹುದಾಗಿದೆ.