ಮೈಸೂರು, ಅ.29– ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸರಗೂರು ತಾಲ್ಲೂಕಿನ ಬೆಣ್ಣೆಗೆರೆಯಲ್ಲಿ ರಾಜಶೇಖರ್ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದರು.
ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ದಾಳಿ ಮಾಡಿ ಸಾಯಿಸಿತ್ತು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದ್ದರು. ಮೈಸೂರಿನ ಕೆಆರ್ ಆಸ್ಪತ್ರೆ ಶವಾಗಾರದ ಬಳಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದ ವೇಳೆ ಸಚಿವ ಈಶ್ವರ್ ಖಂಡ್ರೆ ಆಗಮಿಸಿದಾಗ ಸಚಿವರಿಗೆ ಘೇರಾವ್ ಹಾಕಿ ಅರಣ್ಯಾಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದಿದ್ದರು.
ಅಲ್ಲದೆ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ ಮಾನವ ಹಕ್ಕು ವನ್ಯಜೀವಿಗಳ ಸಂಘರ್ಷಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿದ್ದರು. ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆ ಹುಲಿ ಸೆರೆಗಾಗಿ ಕಾರ್ಯಾಚರಣೆ ಕೈಗೊಂಡು ಸಾಕಾನೆಗಳ ಸಹಾಯದಿಂದ ಯಡಿಯಾಲ ಅರಣ್ಯ ವಲಯದ ಮಳ್ಳೂರು ಬಳಿ ಅರವಳಿಕೆ ಮದ್ದು ನೀಡಿ ಹುಲಿಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಹುಲಿ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
