ರಾಂಚಿ, ನ.6- ವೇಗವಾಗಿ ಬಂದ 18 ಚಕ್ರಗಳ ಟ್ರಕ್ ಹರಿದು ಮೂವರು ಮಕ್ಕಳು ಹಾಗೂ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟ ಘಟನೆ ತಡರಾತ್ರಿ ಕರ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ರಾ-ತೋಪಾರ್ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ಅತಿವೇಗದಲ್ಲಿ ಬಂದ ಟ್ರಕ್ ರಸ್ತೆ ಪಕ್ಕದಲ್ಲಿದ್ದವರ ಮೇಲೆ ಹರಿದಿದೆ. ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಖುಂಟಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ರಿಷಭ್ ಗರ್ಗ್ ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಇನ್ನೊಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಟ್ರಕ್ ಚಾಲಕ ವಾಹನ ನಿಲ್ಲಿಸಿ ಪರಾರಿಯಾಗಿದ್ದಾನೆ. ಮೃತರೆಲ್ಲರೂ ಸ್ಥಳೀಯ ನಿವಾಸಿಗಳೆಂದು ತಿಳಿದುಬಂದಿದೆ.
