ಪಾಟ್ನಾ, ಜುಲೈ 22-ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಇಂದು ಪಾಟ್ನಾದಲ್ಲಿ ಘರ್ಷಣೆ ನಡೆದಿದೆ.ಬಿಹಾರ ಬಿಜೆಪಿ ಅಧ್ಯಕ್ಷ ಸಂಜಯ್ ಸರಾವೋಗಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ, ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧದ ಘೋಷಣೆಗಳಿರುವ ಪೋಸ್ಟರ್ ಹಾಗೂ ಬ್ಯಾನರ್ಗಳನ್ನು ಹಿಡಿದು ಬಿಹಾರ ಪ್ರದೇಶ ಕಾಂಗ್ರೆಸ್ ಸಮಿತಿ (ಬಿಪಿಸಿಸಿ) ಕಚೇರಿಯಾಗಿರುವ ಸದಾಕತ್ ಆಶ್ರಮದವರೆಗೆ ಮೆರವಣಿಗೆ ನಡೆಸಿದರು.
ಈ ವೇಳೆ ಬಿದಿರಿನ ಕೋಲುಗಳನ್ನು ಹಿಡಿದು ಬಂದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮೆರವಣಿಗೆಯನ್ನು ತಡೆದ ಪರಿಣಾಮ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದರು.
ಘರ್ಷಣೆಯಲ್ಲಿ ಉಭಯ ಪಕ್ಷಗಳ ಹಲವರು ಗಾಯಗೊಂಡು ರಕ್ತಸ್ರಾವವಾಗುತ್ತಿರುವುದು ಕಂಡುಬಂದಿತು. ಆದರೆ, ಎಷ್ಟು ಮಂದಿ ಗಾಯಗೊಂಡಿದ್ದಾರೆ ಅಥವಾ ಎಷ್ಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಡರಾತ್ರಿ ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಸೇರಿದಂತೆ ಪಕ್ಷದ ನಾಯಕರು ಪಾಟ್ನಾದ ಲೋಕ ಭವನದ ಎದುರು ಧರಣಿ ನಡೆಸಿ, ದೆಹಲಿಯಲ್ಲಿ ಪ್ರತಿಪಕ್ಷ ನಾಯಕರ ವಿರುದ್ಧ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿದ್ದರು.
