Homeರಾಷ್ಟ್ರೀಯರಸಗೊಬ್ಬರ, ಬಿತ್ತನೆ ಬೀಜ, ನೀರಿನ ಅಭಾವ ನೀಗಿಸಲು ಡಿಸಿಗಳಿಗೆ ಸಿಎಂ ಸೂಚನೆ

ರಸಗೊಬ್ಬರ, ಬಿತ್ತನೆ ಬೀಜ, ನೀರಿನ ಅಭಾವ ನೀಗಿಸಲು ಡಿಸಿಗಳಿಗೆ ಸಿಎಂ ಸೂಚನೆ

CM instructs DCs to address shortage of fertilizer, seeds, and water

ಬೆಂಗಳೂರು, ಜೂ.13- ಕೃಷಿ ಚಟುವಟಿಕೆಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆ ಯಾಗಬಾರದು, ಜಲಾಶಯಗಳಲ್ಲಿ ನೀರಿನ ಸಂಗ್ರಹವನ್ನು ಸಮರ್ಪಕವಾಗಿ ಕಾಯ್ದುಕೊಳ್ಳುವ ಮೂಲಕ ಕುಡಿಯುವ ನೀರಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಶೈಕ್ಷಣಿಕ ಚಟುವಟಿಕೆಗಳ ವಿಚಾರದಲ್ಲಿ ನಿಗಾವಹಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ನಿರ್ದೇಶನ ನೀಡಿದ್ದಾರೆ.

ಇತ್ತೀಚೆಗೆ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿಯವರು ಹಲವು ರೀತಿಯ ಸೂಚನೆಗಳನ್ನು ನೀಡಿದ್ದರು. ಮುಂದುವರೆದು ಇಂದು ಜಿಲ್ಲಾ ಕೇಂದ್ರಗಳ ಮುಖ್ಯಸ್ಥರಾಗಿರುವ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಗಳ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಮೂಲಕ ಆಡಳಿತ ಜನ ಪರವಾಗಿದೆ ಎಂಬುದನ್ನು ಖಚಿತಪಡಿಸಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಜೊತೆಗೆ ಸಮಸ್ಯೆಗಳಿಗೂ ತ್ವರಿತವಾಗಿ ಸ್ಪಂದಿಸುವಂತೆ ಸೂಚಿಸಿದ್ದಾರೆ.

ರಸ ಗೊಬ್ಬರದ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಕೆಲವು ಕಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಸ್ಥಿತಿಯನ್ನು ಜಿಲ್ಲಾಡಳಿತ ಸೂಕ್ಷ್ಮವಾಗಿ ನಿಭಾಯಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಕೊರತೆಯ ಮುನ್ಸೂಚನೆ ಇದೆ. ಹವಾಮಾನ ವರದಿಗೆ ಅನುಗುಣವಾಗಿ ಕೃಷಿ ಬೆಳೆಗಳನ್ನು ಬೆಳೆಯಲು ಕೃಷಿಕರಿಗೆ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಕೈಗಾರಿಕೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಬೇಕು. ಅನಗತ್ಯವಾಗಿ ನಿಯಮಗಳ ನೆಪ ಹೇಳಿ ತೊಂದರೆ ಕೊಡಬಾರದು, ಭೂ ಪರಿವರ್ತನೆ, ಮಂಜೂರಾತಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ವಿಳಂಬ ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಅನರ್ಹರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ ಮುಖ್ಯಮಂತ್ರಿಯವರು, ರಸ್ತೆ ಸುಧಾರಣೆ, ಮೂಲ ಸೌಲಭ್ಯಗಳ ಸೃಷ್ಟಿ, ಮಳೆ ಅನಾಹುತಗಳ ಮುನ್ನೆಚ್ಚರಿಕೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ಕಾಳಜಿವಹಿಸುವಂತೆ ಆದೇಶಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಕೃಷ್ಣಭೈರೇಗೌಡ, ಯು.ಟಿ.ಖಾದರ್‌ ಸೇರಿದಂತೆ ಹಲವಾರು ಮಂದಿ ಸಭೆಯಲ್ಲಿ ಭಾಗವಹಿಸಿದರು.

RELATED ARTICLES
spot_img

Latest News