ಮಧುರೈ(ತಮಿಳುನಾಡು),ನ.24- ಮಧುರೈ ಜಿಲ್ಲೆಯ ಪ್ರಸಿದ್ಧ ತಿರುಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಗೈ ದೀಪಂ ಹಬ್ಬದ ಅಂಗವಾಗಿ ದೀಪ ಬೆಳಗಿಸುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿವೆ.
ತಿರುಪರಂಕುಂದ್ರಂ ಬೆಟ್ಟದ ಮೇಲಿರುವ ಅರುಲಿಗು ಸುಬ್ರಮಣಿಯ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ದೀಪಸ್ತಂಭ (ದೀಪಥೂನ್) ಮೇಲೆ ಮಂಗಳವಾರ ಕಾರ್ತಿಗೈ ದೀಪಂ ಹಬ್ಬದ ಅಂಗವಾಗಿ ದೀಪ ಬೆಳಗಿಸುವ ಕಾರ್ಯಕ್ರಮ ನಿಗದಿಯಾಗಿದೆ. ಈ ಆಚರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಧಾರ್ಮಿಕ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.
5 ಸಾವಿರ ಪೊಲೀಸರ ನಿಯೋಜನೆ
ದೀಪ ಬೆಳಗಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಧುರೈ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 10 ಪೊಲೀಸ್ ವರಿಷ್ಠಾಧಿಕಾರಿಗಳು, 50ಕ್ಕೂ ಹೆಚ್ಚು ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ 132 ಪೊಲೀಸ್ ಇನ್ಸ್ ಪೆಕ್ಟರ್‌ಗಳು ಸೇರಿದಂತೆ ಸುಮಾರು 5 ಸಾವಿರ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಧುರೈ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಅವರು ಸೋಮವಾರ ಜಿಲ್ಲೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಃಓ) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸೋಮವಾರ ರಾತ್ರಿ 9 ಗಂಟೆಯಿಂದ ನವೆಂಬರ್ 25ರ ಬೆಳಿಗ್ಗೆ 10 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರಲಿದೆ.
ಇದಲ್ಲದೆ ತಿರುಪರಂಕುಂದ್ರಂ ಬೆಟ್ಟದ ಸುತ್ತಮುತ್ತಲಿನ ಪ್ರದೇಶವನ್ನು ೞರೆಡ್ ಝೋನ್ ಎಂದು ಘೋಷಿಸಲಾಗಿದ್ದು, ಯಾವುದೇ ಡ್ರೋನ್ ಅಥವಾ ಮಾನವರಹಿತ ವೈಮಾನಿಕ ವಾಹನಗಳು ಹಾರಾಟ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ.
