ನವದೆಹಲಿ, ಏ. 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ನಡೆಸಿದ್ದ ಗುಂಡಿನ ದಾಳಿಗೆ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇರಾನ್ ನಡೆಸಿದ ದಾಳಿಯಲ್ಲಿ ನಾಲ್ವರು ಭಾರತೀಯರು ಬಲಿಯಾಗಿರುವುದನ್ನು ವಿದೇಶಾಂಗ ಇಲಾಖೆ ದೃಢಪಡಿಸಿದ್ದು, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ.
ಅಮೆರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗುವುದು ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿತ್ತು.
ಇರಾನ್ನ ವಿದೇಶಾಂಗ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದರೂ, ಭಾರತೀಯ ಧ್ವಜವಿದ್ದ ಹಡಗುಗಳ ಮೇಲೆ ದಾಳಿ ನಡೆದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭಾರತ ಸರ್ಕಾರ ಇರಾನ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ದಾಖಲಿಸಿದೆ ಹಾಗೂ ದಾಳಿಯ ಉದ್ದೇಶದ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದೆ.
