ನವದೆಹಲಿ, ಏ.17-ಪಶ್ಚಿಮ ಏಷ್ಯಾದ ಸಂಘರ್ಷ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಸಂದರ್ಭದಲ್ಲೇ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಾತುಕತೆ ಸಂದರ್ಭದಲ್ಲಿ ಅವರು ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿಯ ಭದ್ರತೆ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಮ್ಯಾಕ್ರನ್ ಅವರೊಂದಿಗೆ ನಡೆದ ಮಾತುಕತೆ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಶ್ಚಿಮ ಏಷ್ಯಾದಲ್ಲಿ ಸ್ಥಿರತೆ ಖಚಿತಪಡಿಸಿಕೊಳ್ಳುವ ಮತ್ತು ಸುರಕ್ಷಿತ ಸಮುದ್ರ ಮಾರ್ಗಗಳನ್ನು ನಿರ್ವಹಿಸುವ ಪ್ರಾಮುಖ್ಯತೆಯ ಬಗ್ಗೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರ ಮುಕ್ತಗೊಳಿಸಲು ಪುನಃಸ್ಥಾಪಿಸುವ ತುರ್ತು ಅಗತ್ಯಗಳನ್ನ ಒತ್ತಿ ಹೇಳಿದ್ದಾರೆ. ನನ್ನ ಆತ್ಮೀಯ ಗೆಳೆಯ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಫೋನ್ ಕರೆ ಬಂತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ನಾವು ಚರ್ಚಿಸಿದ್ದೇವೆ. ಜೊತೆಗೆ ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಮುಕ್ತ ಸಂಚಾರಕ್ಕೆ ಅಗತ್ಯವಿರುವ ಅಗತ್ಯತೆಗಳನ್ನು ತುರ್ತಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒಪ್ಪಿಕೊಂಡಿದ್ದೇವೆ ಎಂದು ಮೋದಿ ಎಕ್‌್ಸ ಮಾಡಿದ್ದಾರೆ.
ಈ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ನಾವು ನಿರಂತರ ಸಹಕಾರ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಏ. 14 ರಂದು ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್‌್ಡ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ದೂರವಾಣಿ ಮೂಲಕ ಸುಮಾರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಹಾರ್ಮುಜ್ ಜಲಸಂಧಿ ದಿಗ್ಬಂಧನದ ಬಗ್ಗೆಯೂ ಚರ್ಚಿಸಿದ್ದರು ಎಂದು ಅಮೆರಿಕದ ರಾಯಭಾರಿ ಗೋರ್ ತಿಳಿಸಿದ್ದರು.
