ನವದೆಹಲಿ, ಅ. 26- ರಾಷ್ಟ್ರ ರಾಜಧಾನಿ ದೆಹಲಿಯ ಕೇಂದ್ರ ಸರ್ಕಾರದ ಪ್ರಮುಖ ಕಚೇರಿಗಳು ಇರುವ ಐತಿಹಾಸಿಕ ನಾರ್ತ್ ಬ್ಲಾಕ್ ಕಟ್ಟಡದ ಮೇಲ್ಛಾವಣಿಯಲ್ಲಿ ಸೋಮವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಕಟ್ಟಡದ ಸುತ್ತಮುತ್ತ ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಳಿಗ್ಗೆ 11.10ರ ಸುಮಾರಿಗೆ ದೆಹಲಿ ಅಗ್ನಿಶಾಮಕ ಸೇವೆಗೆ ತುರ್ತು ಕರೆ ಬಂದಿದ್ದು, ತಕ್ಷಣವೇ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಳಿಗ್ಗೆ 11.25ರ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.
ಕಟ್ಟಡದ ಮೇಲ್ಛಾವಣಿಯಲ್ಲಿ ಅಳವಡಿಸಲಾಗಿದ್ದ ಹವಾನಿಯಂತ್ರಣ ವ್ಯವಸ್ಥೆಯ ಬಾಯ್ಲರ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಈ ವೇಳೆ ವೆಲ್ಡಿಂಗ್ ಕೆಲಸ ನಡೆಯುತ್ತಿತ್ತು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಘಟನೆಯಿಂದ ಉಂಟಾದ ಹಾನಿ ಅಥವಾ ಯಾವುದೇ ಪ್ರಾಣಾಪಾಯದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
