ಮುಂಬೈ, ಆ.12- ಭಾರಿ ಮಳೆಯ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮುಂಬೈನ ಕುರ್ಲಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.6ರಿಂದ 8 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಬೃಹನುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಚಿರಾಗ್ ನಗರದ ಗೌಶಿಯಾ ಚಾಲ್ನಲ್ಲಿ ಮುಂಜಾನೆ 3.48ಕ್ಕೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅಗ್ನಿಶಾಮಕ ದಳ, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ಆಂಬ್ಯುಲೆನ್ಸ್ ಸೇವೆ ಹಾಗೂ ನಾಗರಿಕ ಸಂಸ್ಥೆಯ ವಾರ್ಡ್ ಸಿಬ್ಬಂದಿಯ ತಂಡಗಳನ್ನು ನಿಯೋಜಿಸಲಾಗಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿರುವ ಶಂಕೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮೃತರ ಮಾಹಿತಿ ಕಲೆ ಹಾಕಲಾಗುತ್ತಿದೆ ಗಾಯಗೊಂಡಿರುವ ಸೋಹೆಲ್ ಅನ್ಸಾರಿ (18),ಮೊಹಮದ್ ಅನ್ಸಾರಿ (14) ಎಂಬುವ ಇಬ್ಬರನ್ನೂ ಕುರ್ಲಾದ ಬಿಎಂಸಿ ನಿರ್ವಹಣೆಯ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮುಂಬೈ ಮೇಯರ್ ರಿತು ತಾವ್ಡೆ ಕೂಡ ಸ್ಥಳಕ್ಕೆ ಭೇಟಿ ನೀಡಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು.
