ನವದೆಹಲಿ,ಜು.21- ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್ – ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಘೋರ್ ಪಾಪ (ಗಂಭೀರ ಪಾಪ) ಎಂದು ಅಸಮಾಧಾನ ಹೊರಹಾಕಿರುವ ಪ್ರಧಾನಿ ನರೇಂದ್ರಮೋದಿ ಅವರು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಕಠಿಣ ಕ್ರಮದ ಜೊತೆಗೆ ತಪ್ಪಿತಸ್ಥರ ವಿರುದ್ದ ನಿರ್ದಾಕ್ಷ್ಯಣ್ಯ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ದೆಹಲಿಯಲ್ಲಿ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಮಂಗಲ್ ಮಿಲನ್ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಅಕ್ರಮ ಹಾಗೂ ಸೋರಿಕೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಲಾಗಿದ್ದು, ಸದ್ಯ 13 ಆರೋಪಿಗಳು ಕಸ್ಟಡಿಯಲ್ಲಿದ್ದಾರೆ. ಅಕ್ರಮವೆಸಗಿದ ಪ್ರತಿಯೊಬ್ಬರಿಗೂ ಕಾನೂನಿನಡಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದು ದೇಶದ ಯುವ ಸಮುದಾಯಕ್ಕೆ ಭರವಸೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರ ಈ ಸಂದೇಶ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವತ್ತ ಸರ್ಕಾರದ ಗಮನವಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವುದು ಮತ್ತು ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಒತ್ತಿ ಹೇಳಿದ್ದಾರೆ.
ದೆಹಲಿಯ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸಂಸದರು ಯುವಜನರನ್ನು ಮತ್ತು ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಹಾದಿಯಲ್ಲಿ ನಡೆಸಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಯುವುದು ಮತ್ತು ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವುದು ರಾಷ್ಟ್ರೀಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಈವರೆಗೂ 13 ಆರೋಪಿಗಳನ್ನು ಬಂಧಿಸಲಾಗಿದೆ. ಭವಿಷ್ಯದಲ್ಲಿ ಸೋರಿಕೆಯಾಗದಂತೆ ಕಠಿಣ ಕ್ರಮ ಮತ್ತು ರಾಜ್ಯಗಳ ಸಹಕಾರ ನೀಡಬೇಕು. ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸುವುದು ಸರ್ಕಾರದ ಗುರಿ ಎಂದು ಅವರು ಒತ್ತಿ ಹೇಳಿದ್ದಾರೆ. ಪ್ರಶ್ನಾಪತ್ರಿಕೆ ಸೋರಿಕೆ ತಡೆಯುವುದು ರಾಷ್ಟ್ರೀಯ ಜವಾಬ್ದಾರಿ ಎಂದ ಮೋದಿ ಅವರು, ತಪ್ಪುಗಳಿಗೆ ಅವಕಾಶ ನೀಡದ ಪರೀಕ್ಷಾ ವ್ಯವಸ್ಥೆಯನ್ನು ನಿರ್ಮಿಸಲು ಸಾಮೂಹಿಕ ಪ್ರಯತ್ನಗಳನ್ನು ಮಾಡಬೇಕು. ತಪ್ಪು ರಹಿತ ಪರೀಕ್ಷಾ ವ್ಯವಸ್ಥೆಯನ್ನು ನಿರ್ಮಿಸಲು ಸಾಮೂಹಿಕ ಪ್ರಯತ್ನಗಳಿಗೆ ಮೋದಿ ಕರೆ ನೀಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದೆ. ಸಂಸತ್ತಿನಲ್ಲಿ ಮತ್ತು ಹೊರಗೆ ಪ್ರತಿಭಟನೆಗಳು ನಡೆಯುತ್ತಿದ್ದರೂ, ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷೆಗಳ ಪವಿತ್ರತೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು. ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸುವಲ್ಲಿ ಒಗ್ಗಟ್ಟಿನಿಂದ ಇರಬೇಕು. ಸಂಸತ್ತಿನಲ್ಲಿ ರಚನಾತಕವಾಗಿ ಕೆಲಸ ಮಾಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ ಅವರು, ರಾಜಕೀಯ ಭಿನ್ನಾಭಿಪ್ರಾಯಗಳು ಇರಬಹುದು, ಆದರೆ ಎಲ್ಲಾ ಸಂಸದರು ದೇಶದ ಭವಿಷ್ಯ ಮತ್ತು ಅದರ ಯುವಕರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಹಂಚಿಕೆಯ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಪ್ರಧಾನಿಯನ್ನು ಉಲ್ಲೇಖಿಸಿ ಕಿರಣ್ ರಿಜಿಜು ಹೇಳಿದರು.
ನೂರಾರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಹಾರ ಮತ್ತು ಲಾಠಿಚಾರ್ಜ್ ನಡೆಸಿ ಸಂಸತ್ತಿನ ಮೇಲೆ ಮೆರವಣಿಗೆ ನಡೆಸದಂತೆ ತಡೆದ ಒಂದು ದಿನದ ನಂತರ ಈ ಹೇಳಿಕೆಗಳು ಬಂದಿವೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಸಂಬಂಧವಿಲ್ಲದ ವಿಚಾರಣೆಯ ಸಂದರ್ಭದಲ್ಲಿ ಕೆಲವು ನಿರುದ್ಯೋಗಿ ಯುವಕರನ್ನು ಜಿರಳೆಗಳಿಗೆ ಹೋಲಿಸಿದ ನಂತರ ಮೇ ತಿಂಗಳಲ್ಲಿ ಹೊರಹೊಮಿದ ವಿಡಂಬನಾತಕ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದ ಪ್ರತಿಭಟನಾಕಾರ ವಿದ್ಯಾರ್ಥಿಗಳು, ನೀಟ್ ಪತ್ರಿಕೆ ಸೋರಿಕೆ ಸೇರಿದಂತೆ ಸ್ಪರ್ಧಾತಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎಲ್ಲಾ ಕೇಂದ್ರ ಸಚಿವರು ಮತ್ತು ಎನ್‌ಡಿಎ ಸಂಸದರು ಭಾಗವಹಿಸಿದ್ದರು.
